ಮುಡಾ ಹಗರಣ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹ
ಮುಡಾ ಹಗರಣ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹ
ಕಲಬುರಗಿ: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದ್ದು,ಈ ಸಂಬಂಧ ಹೈಕೋರ್ಟ್ ತೀರ್ಪನ್ನು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಬಡವರ ನಿವೇಶನ ಕಬಳಿಸಿ, ಲಜ್ಜೆ ಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ.ಕೂಡಲೇ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ,ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹವಾಗಿದೆ.'ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳುಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಚರಿಸಿದೆ. ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರಿಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಅವರು ಒತ್ತಾಯಿಸಿದ್ದಾರೆ.