ಕೊಪ್ಪಳ ಜಿಲ್ಲೆಯ ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ : 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ.
ಕೊಪ್ಪಳ ಜಿಲ್ಲೆಯ ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ : 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ.
ಕೊಪ್ಪಳ : ರಾಜ್ಯದಾದ್ಯಂತ ಸುದ್ದಿ ಮಾಡಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲೆ ನಡೆದ ಪೈಶಾಚಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಶಿಕ್ಷೆ ಪ್ರಕಟಿಸಿದೆ.
ಈ ಪ್ರಕರಣದಲ್ಲಿ ಒಟ್ಟು 101 ಜನರನ್ನು ಅಪರಾಧಿಗಳೆಂದು ನ್ಯಾಯಾಲಯ ಹೇಳಿದ್ದು, ಅದರಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಇನ್ನೂಳಿದ 3 ಜನರಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ ಘೋಷಿಸಿದೆ.
ಮರಕುಂಬಿ ಗ್ರಾಮದಲ್ಲಿ ಸುಮಾರು 9 ವರ್ಷಗಳ ಹಿಂದೆ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ದಲಿತರ ಓಣಿಗೆ ನುಗ್ಗಿ ದಲಿತರು ವಾಸವಾಗಿದ್ದ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಜನರ ವಿರುದ್ದದ ಆರೋಪ ಸಾಬೀತಾಗಿದೆ ಎಂದು ಸೋಮವಾರ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು.ಆದರೆ ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ಹೇಳಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ್ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ನೀಡಿದ್ದರು.
ಮರುಕುಂಬಿಯ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದ ಈ ಘಟನೆಯಿಂದ 2014 ರಲ್ಲಿ ಇಡೀ ರಾಜ್ಯವೆ ಬೆಚ್ಚಿಬಿದ್ದಿತ್ತು.
ಗ್ರಾಮದ ಹೋಟೆಲ್‌ಗಳು, ಅಂಗಡಿ ಮುಂಗಟ್ಟುಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು.
ಇದೇ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ಈ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಈ ಘಟನೆಯನ್ನು ವಿರೋಧಿಸಿ ಎಡ ಪಕ್ಷಗಳು ಸೇರಿದಂತೆ ಹಲವು ದಲಿತ ಸಂಘಟನೆಗಳು ಹಾಗೂ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಆರಂಭದಲ್ಲಿ 117 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಆದರೆ ಅವರಲ್ಲಿ ಕೆಲವರು ಸಾವನ್ನಪ್ಪಿದ್ದರೆ ಇನ್ನೂ ಕೆಲವರ ಆರೋಪ ಸಾಬಿತಾಗಿಲ್ಲ. ಸೋಮವಾರ ನ್ಯಾಯಾಲಯ ತೀರ್ಪು ಪ್ರಕಟಿಸಿದಾಗ 100 ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ತಲೆ ಮರೆಸಿಕೊಂಡು ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ತಿವ್ರ ಶೋಧ ನಡೆಸಿದ್ದಾರೆ.
101 ಜನರಿಗೆ ಏಕಕಾಲದಲ್ಲಿ ಶಿಕ್ಷೆ ವಿಧಿಸುತ್ತಿರುವುದು ಜಿಲ್ಲೆಯ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ನಡೆದಿದೆ.
ಈ ಘಟನೆಯ ನಂತರ ಮೂರು ತಿಂಗಳ ಕಾಲ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದೌರ್ಜನ್ಯವನ್ನು ವಿರೋಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಲಿತ ಮುಖಂಡ ವೀರೇಶ ಮರುಕುಂಬಿ 2014 ರಲ್ಲಿ ಕೊಪ್ಪಳ ರೈಲು ನಿಲ್ದಾಣದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಈ ತೀರ್ಪು ಇಂತಹ ಹೀನ ಕೃತ್ಯ ಎಸಗುವ ಅಪರಾಧಿಗಳಿಗೆ ಎಚ್ಚರಿಕೆ ಗಂಟೆಯಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.