ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ : ಮಲ್ಲಿಕಾರ್ಜುನ ಮರತೂರಕರ್
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ ಮಲ್ಲಿಕಾರ್ಜುನ ಮರತೂರಕರ್
ಕಲಬುರಗಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯರ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯ ಸರಕಾರವನ್ನು ವಜಾಗೊಳಿಸಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ವೇಳೆ ರಾಜ್ಯಪಾಲರ ನಡೆಯನ್ನು ಟೀಕಿಸುವ ಭರದಲ್ಲಿ ಅವರನ್ನು ಏಕವಚನದಲ್ಲಿ ನಿಂದಿಸಿ, ಸಂವಿಧಾನಿಕ ಹುದ್ದೆಗೆ ಅಗೌರವ ತೋರಿದ್ದಾರೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಬಾಂಗ್ಲಾದೇಶದ ರೀತಿಯಲ್ಲಿ ಕಚೇರಿಗೆ ನುಗ್ಗುವಂತ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಾಗುತ್ತದೆ. ಗವರ್ನರ್ ಹಿಂದಕ್ಕೆ ಕರೆಯಿಸಿಕೊಳ್ಳಬೇಕು.ಅವರು ರಾಜ್ಯ ಬಿಟ್ಟು ತೊಲಗಬೇಕು, ಇಲ್ಲದಿದ್ದರೆ ರಾಜಭವನಕ್ಕೆ ನುಗ್ಗುವುದು ಖಂಡಿತ ಎಂದು ಪ್ರಚೋನದಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
'ಅದೇ ರೀತಿ ಸಚಿವ ಜಮೀರ್ ಅಹ್ಮದ್ ಖಾನ್ ಸಹ ರಾಜ್ಯದಲ್ಲಿ ಜನ ದಂಗೆ ಎದ್ದು, ಮುಂದಾಗುವ ಅನಾಹುತಕ್ಕೆ ರಾಜ್ಯಪಾಲರೇ ನೇರ ಹೊಣೆಗಾರರಾಗುತ್ತಾರೆ ಎನ್ನುವ ಮೂಲಕ ಸಾಂವಿಧಾನಿಕ ಹುದ್ದೆಗೆ ಆಗೌರವ ತೋರಿಸಿದ್ದಾರೆ. ಸಾಂವಿಧಾನಿಕ ಸಂಸ್ಥೆ ಹಾಗೂ ವ್ಯಕ್ತಿಗಳ ವಿರುದ್ಧ ಅಪಪ್ರಚಾರ ಮತ್ತು ಕಾನೂನು ಸುವ್ಯವಸ್ಥೆ ವಿಫಲಗೊಳಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು.