ಬಿಜೆಪಿ- ಜೆಡಿಎಸ್ ವಿರುದ್ಧ ಹೋರಾಟ ಆಗಸ್ಟ್ 29ಕ್ಕೆ

ಬಿಜೆಪಿ- ಜೆಡಿಎಸ್ ವಿರುದ್ಧ ಹೋರಾಟ ಆಗಸ್ಟ್ 29ಕ್ಕೆ

ಬಿಜೆಪಿ- ಜೆಡಿಎಸ್ ವಿರುದ್ಧ ಹೋರಾಟ ಆಗಸ್ಟ್ 29ಕ್ಕೆ

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಹಾಗೂ ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ, ಜೆಡಿಎಸ್‌ ನಡೆಯನ್ನು ವಿರೋಧಿಸಿ ಆಗಸ್ಟ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ. ಸಾಗರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯ ಅವರು ಎರಡು ಬಾರಿ ಸಿಎಂ ಆಗಿ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ, ವಾಮಮಾರ್ಗದ ಮೂಲಕ ಸರ್ಕಾರವನ್ನು ಕೆಡವಿ, ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ಅದಕ್ಕೆ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ದ್ವೇಷದ ರಾಜಕಾರಣವನ್ನೇ ಉಸಿರಾಗಿಸಿಕೊಂಡಿರುವ ಬಿಜೆಪಿ, ಜೆಡಿಎಸ್‌ ನಾಯಕರು, ರಾಜಭವನ ಹಾಗೂ ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಅರ್ಜಿ ಸಲ್ಲಿಸಿದ ತಕ್ಷಣವೇ ತನಿಖೆಗೆ ತರಾತುರಿಯಲ್ಲಿ ಕಾನೂನುಬಾಹಿರ ವಾಗಿ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ದೂರಿದರು.

‘ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನ ಬಾಹಿರವಾಗಿ ನಡೆದುಕೊಂಡಿದ್ದಾರೆ. ರಾಜ್ಯಪಾಲರನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಒತ್ತಾಯಿಸಿ ನಗರದಲ್ಲಿ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ ಎಂದರು.

ಸುರೇಶ ಹಾದಿಮನಿ, ಉಮೇಶ ನರೋಣಾ, ಎಸ್‌.ಪಿ. ಸುಳ್ಳದ್, ಬಿ.ಸಿ. ವಾಲಿ, ಕೃಷ್ಣಪ್ಪ ಕರಣಿಕ್, ರೇವಣಸಿದ್ದ ಜಾಲಿ, ಅಂಬಣ್ಣ ಜೀವಣಗಿ ಉಪಸ್ಥಿತರಿದ್ದರು.