5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಪ್ರಭು ಚವ್ಹಾಣ
5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಪ್ರಭು ಚವ್ಹಾಣ
ಕಮಲನಗರ: ಐದು ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹನಿ ಹಾಕಿಸುವ ಮೂಲಕ ಮಹಾಮಾರಿ ಪೋಲಿಯೋ ಮರಳಿ ಬಾರದಂತೆ ಪೋಷಕರು ಜಾಗೃತಿ ವಹಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.
ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿನ ಗೃಹ ಕಛೇರಿಯಲ್ಲಿ ಡಿ.21ರಂದು ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಪಲ್ಸ್ ಪೋಲಿಯೋ ಪ್ರಮುಖ ಪಾತ್ರ ವಹಿಸುತ್ತಿದೆ. ದೇಶದ ಆರೋಗ್ಯ ಕ್ಷೇತ್ರದಲ್ಲಿ ಪೋಲಿಯೋ ಕಾರ್ಯಕ್ರಮ ಕ್ರಾಂತಿಕಾರಕ ಬದಲಾವಣೆ ತಂದಿದೆ. ಈಗಾಗಲೇ ಭಾರತ ಪೋಲಿಯೋ ಮುಕ್ತ ರಾಷ್ಟ್ರವೆಂಬ ಹೆಗ್ಗಳಿಕೆ ಹೊಂದಿದೆ. ಆದರೂ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ರೋಗ ಇನ್ನೂ ಜೀವಂತ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗಾಗಿ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯವಶ್ಯಕ ಎಂದರು.
ಪೋಲಿಯೋ ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ. ಹಾಗಾಗಿ ಪೋಷಕರು ನಿರ್ಭಯವಾಗಿ ತಮ್ಮ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಮನವಿ ಮಾಡಿದರು.
ಪ್ರತಿ ಗ್ರಾಮಗಳಲ್ಲಿ ಯಾವೊಬ್ಬ ಮಗುವು ಲಸಿಕೆಯಿಂದ ವಂಚಿತಗೊಳ್ಳದಂತೆ ನೋಡಿಕೊಳ್ಳಬೇಕು. ಮನೆ ಮನೆ ಭೇಟಿ ವ್ಯವಸ್ಥಿತವಾಗಿ ನಡೆಸಬೇಕು. ಅಲೆಮಾರಿ ಸಮುದಾಯಗಳು ಇರುವ ಪ್ರದೇಶಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ ಅವರು ಮಾತನಾಡಿ, ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಒಟ್ಟು 27980 ಮಕ್ಕಳಿದ್ದು ಎಲ್ಲರಿಗೂ ಲಸಿಕೆ ಹಾಕಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನಗರ ಪ್ರದೇಶದಲ್ಲಿ 15 ಮತ್ತು ಗ್ರಾಮೀಣ ಪ್ರದೇಶದಲ್ಲಿ 159 ಬೂತ್ ಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ, ಮೆಡಿಕಲ್ ಆಫಿಸರ್ ಡಾ.ಅಮಿತ ಪಾಲ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
