ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿ.ಎಂ. ಸೇರಿ ಗಣ್ಯರ ಆಗಮನ || ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೆ ಇಂದೇ ಪಟ್ಟಿ ಕೊಡಿ -ಬಿ.ಫೌಜಿಯಾ ತರನ್ನುಮ್

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿ.ಎಂ. ಸೇರಿ ಗಣ್ಯರ ಆಗಮನ ||  ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೆ ಇಂದೇ ಪಟ್ಟಿ ಕೊಡಿ  -ಬಿ.ಫೌಜಿಯಾ ತರನ್ನುಮ್

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿ.ಎಂ. ಸೇರಿ ಗಣ್ಯರ ಆಗಮನ:

ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೆ ಇಂದೇ ಪಟ್ಟಿ ಕೊಡಿ

-ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಇದೇ ಸೆಪ್ಟೆಂಬರ್ 17 ರಂದು ಜರುಗುವ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಆಗಮಿಸಲಿದ್ದು, ವಿವಿಧ ಇಲಾಖೆಯಿಂದ ಅಡಿಗಲ್ಲು-ಉದ್ಘಾಟನೆ ಹಾಗೂ ಸೌಲಭ್ಯ ವಿತರಣೆಗೆ ವಿವರವಾದ ಪಟ್ಟಿ ಕೂಡಲೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಉತ್ಸವ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಅವರು, ಸೆ.17 ರಂದು ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಧ್ವಜಾರೋಹಣ ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕು ಮುನ್ನ ಎಸ್.ವಿ.ಪಿ. ವೃತ್ತದಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಹರಿಕಾರ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿಗಳು, ಸಚಿವರು ಸೇರಿ ಹಲವಾರು ಗಣ್ಯರು ಆಗಮಿಸುವ ಸಾಧ್ಯತೆ ಇದ್ದು, ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳು ರಚಿಸಲಾಗಿದ್ದು, ಅದರಂತೆ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದ ಅವರು, ಎಸ್.ವಿ.ಪಿ. ವೃತ್ತ ಮತ್ತು ಪೊಲೀಸ್ ಪರೇಡ್ ಮೈದಾನ ಸುತ್ತ ಸ್ವಚ್ಛತೆ ಕಾಪಾಡಬೇಕು ಮತ್ತು ಗಣ್ಯರ ಭಾಗವಹಿಸುವ ಎಲ್ಲೆಡೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಸೇರಿದಂತೆ ಜನಪರ ಯೋಜನೆಗಳು ಪ್ರತಿಬಿಂಬಿಸುವ ಸ್ತಬ್ದಚಿತ್ರ ಪ್ರದರ್ಶನ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, 371ಜೆ ಕಾಯ್ದೆ ಜಾರಿಯ ದಶಮಾನೋತ್ಸವದ ಈ ಸಂದರ್ಭದಲ್ಲಿ ಪ್ರದೇಶವು ಸಾಧಿಸಿದ ಪ್ರಗತಿ ಮತ್ತು ಇತಿಹಾಸ ಹಿನ್ನೆಲೆಯ ಅಪೂರ್ವ ಛಾಯಾಚಿತ್ರ ಪ್ರದರ್ಶನ ಹಾಗೂ ಕಲೆ, ಸಂಸ್ಕೃತಿ ಬಿಂಬಿಸುವಂತೆ ಕಲಾ ಪ್ರದರ್ಶನ ಸಹ ಆಯೋಜಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.

ದೀಪಾಲಂಕಾರದ ವ್ಯವಸ್ಥೆ ಮಾಡಿ:

ಕಲ್ಯಾಣ ಕರ್ನಾಟಕ ಉತ್ಸವ ಈ ಭಾಗಕ್ಕೆ ಸ್ವಾತಂತ್ರ್ಯ ದಿನದಷ್ಟೆ ಸಂಭ್ರಮದ ದಿನವಾಗಿದೆ. ಹೀಗಾಗಿ ಉತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಬೇಕಾಗಿದ್ದು, ಕಲಬುರಗಿ ನಗರದ ಎಸ್.ವಿ.ಪಿ.ಸೇರಿದಂತೆ ಎಲ್ಲಾ ಪ್ರಮುಖ ವೃತ್ತ, ರಾಷ್ಟ್ರನಾಯಕರ ಪ್ರತಿಮೆಗಳಿಗೆ ದೀಪಾಲಂಕಾರದ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತೆ ರೂಪಿಂದರ್ ಸಿಂಗ್ ಕೌರ್, ಎ.ಸಿ.ಪಿ. ಬಿಂದುರಾಣಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.