ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಬೀಳ್ಕೊಡುಗೆ ಸಮಾರಂಭ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಬೀಳ್ಕೊಡುಗೆ ಸಮಾರಂಭ
ಕಲಬುರ್ಗಿ: ಜಿಲ್ಲೆಯ ನೂತನ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿರುವ ಕೆಕೆಆರ್‌ಡಿಬಿ ಅನುದಾನದಡಿ ನಿರ್ಮಿತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಭಾವಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಅಮರೇಶ್ ಗಂಗಾಕರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಗುರುಗಳಿಗೆ ಗುರುದಕ್ಷಿಣೆ ನೀಡುವ ಪರಂಪರೆ ಇತ್ತು. ಆದರೆ ಇಂದಿನ ವಿದ್ಯಾರ್ಥಿಗಳಿಂದ ನಮಗೆ ಬೇಕಾಗಿರುವುದು ಗುರುದಕ್ಷಿಣೆ ಅಲ್ಲ; ನೀವು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವುದೇ ನಮಗೆ ಅತ್ಯುತ್ತಮ ಗುರುಕಾಣಿಕೆ ಎಂದು ಹೇಳಿದರು.
ಮಳ್ಳಿ ಗ್ರಾಮದಲ್ಲಿ ಸುಸಜ್ಜಿತ ಕಟ್ಟಡ, ಸಮರ್ಪಕ ಮೂಲಸೌಕರ್ಯಗಳು ಹಾಗೂ ಎಲ್ಲಾ ವಿಷಯಗಳ ಅನುಭವಸಂಪನ್ನ ಉಪನ್ಯಾಸಕರು ಲಭ್ಯವಿದ್ದು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳೊಂದಿಗೆ ಕಿರು ಕಾಣಿಕೆ ನೀಡಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಜಟ್ಟಪ್ಪ ಎನ್. ಪೂಜಾರಿ
