ಡಾ. ಸತೀಶ್ ಕುಮಾರ್ ಹೊಸಮನಿಗೆ ‘ಬಸವ ಪ್ರಶಸ್ತಿ
ಡಾ. ಸತೀಶ್ ಕುಮಾರ್ ಹೊಸಮನಿಗೆ ‘ಬಸವ ಪ್ರಶಸ್ತಿ
ಬೆಂಗಳೂರು: ಬಸವಜಯಂತಿ ಅಂಗವಾಗಿ ನಗರದ ರಮಣ ಮಹರ್ಷಿ ಸಮಾರಂಭ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ನಿರ್ದೇಶಕರಾದ ಡಾ. ಸತೀಶ್ ಕುಮಾರ್ ಹೊಸಮನಿ ಅವರಿಗೆ ‘ಬಸವ ಪ್ರಶಸ್ತಿ’ ಪ್ರದಾನಿಸಿ ಗೌರವಿಸಲಾಯಿತು.
ತುಮಕೂರಿನ ಸಿದ್ದರಬೇಟ್ಟ ಮಠಾಧ್ಯಕ್ಷ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ, ಮಾಜಿ ಶಾಸಕ ವೈ.ಎ. ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಡಾ. ಹೊಸಮನಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೈಗೊಂಡಿರುವ ನವೀನ ಯೋಜನೆಗಳು ಹಾಗೂ ಸಮಗ್ರ ಶಿಕ್ಷಣ ಬಲವರ್ಧನೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಯಿತು.
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹದ ಆದರ್ಶಗಳು ಇಂದಿನ ಸಮಾಜಕ್ಕೆ ದಿಕ್ಕು ತೋರುವ ಶಕ್ತಿಯಾಗಿದೆ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯ ಎಂಬುದನ್ನು ಡಾ. ಹೊಸಮನಿ ಅವರ ಕಾರ್ಯಗಳು ಸಾಬೀತುಪಡಿಸುತ್ತವೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಸವಣ್ಣನವರ ತತ್ವಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತವಾಯಿತು. ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಕ್ಕನ ಬಳಗದ ತಂಡದಿಂದ ವಚನ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು.
ಶಿಕ್ಷಣ ಇಲಾಖೆಯ ಅಧಿಕಾರಿಗಳು, ಬಸವ ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಮಾರಂಭಕ್ಕೆ ವಿಶೇಷ ಮೆರುಗು ತಂದರು.
