ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿದ್ದಕ್ಕೆ ಕಲಬುರಗಿಯಲ್ಲಿ ಇಡುಗಾಯಿ ಒಡೆದು ಸಂಭ್ರಮ, ವಿಶೇಷ ಪೂಜೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿದ್ದಕ್ಕೆ ಕಲಬುರಗಿಯಲ್ಲಿ ಇಡುಗಾಯಿ ಒಡೆದು ಸಂಭ್ರಮ, ವಿಶೇಷ ಪೂಜೆ
ಕಲಬುರಗಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಿದ್ದಕ್ಕೆ ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿ ಶರಣು ತೆಗ್ಗನೂರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮಾಚರಣೆ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಕರ್ತರು ದೇವಸ್ಥಾನದಲ್ಲಿ ಇಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 60 ಅಡಿ ಎತ್ತರದ ಕಟೌಟ್ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಶರಣು ತೆಗ್ಗನೂರ, “ರಾಜ್ಯದ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಾಗಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನತೆಗೆ ಸಂತಸದ ವಿಷಯವಾಗಿದೆ. ಅವರ ಆಡಳಿತದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸವಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಾಚರಣೆಗೆ ಸಾಕ್ಷಿಯಾದರು.
