ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ ಖಡಕ್ ಆದೇಶ: ಎಸ್‌ಸಿ/ಎಸ್‌ಟಿ ನೌಕರರ ಸಂಘದ ಹೋರಾಟಕ್ಕೆ ಸಂದ ಜಯ – ಮಹೇಶ ಹುಬ್ಬಳ್ಳಿ
ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ ಖಡಕ್ ಆದೇಶ: ಎಸ್‌ಸಿ/ಎಸ್‌ಟಿ ನೌಕರರ ಸಂಘದ ಹೋರಾಟಕ್ಕೆ ಸಂದ ಜಯ – ಮಹೇಶ ಹುಬ್ಬಳ್ಳಿ
ಕಲಬುರಗಿ : ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿರುವುದು ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ನೌಕರರ ಸಂಘದ ನಿರಂತರ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಹೇಶ ಹುಬ್ಬಳ್ಳಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಸಮಾವೇಶದಲ್ಲಿ ಅಂಗೀಕರಿಸಲಾದ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದರು.
ಸಂಘದ ನಿರಂತರ ಹೋರಾಟ ಮತ್ತು ಮನವಿಗಳಿಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಮೇ 25, 2026ರಂದು ಎಲ್ಲಾ ಇಲಾಖೆಗಳಲ್ಲಿನ ಖಾಲಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಮೂಲಕ ಆದೇಶ ಹೊರಡಿಸಿರುವುದು ಸಂತಸ ತಂದಿದೆ. ಈ ಮೂಲಕ ಸರ್ಕಾರ ಸಾಮಾಜಿಕ ನ್ಯಾಯದತ್ತ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಅವರು ಅಭಿಪ್ರಾಯಪಟ್ಟರು.
ಅವರು ಮುಂದುವರಿದು, ಸಂಘವು ಸರ್ಕಾರದ ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದು, ಅವುಗಳಲ್ಲಿ ರಾಜ್ಯದ ನಾಗರಿಕ ಸೇವೆಗಳಲ್ಲಿ ಮೀಸಲಾತಿ ಆಧಾರಿತ ಬಡ್ತಿಗೆ ಸಂಬಂಧಿಸಿದ 2018ರ ಕಾಯ್ದೆಯನ್ನು ಸಮಗ್ರವಾಗಿ ಜಾರಿಗೊಳಿಸುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಮೇಲಿನ ದೌರ್ಜನ್ಯಗಳ ಕುರಿತು ದೂರುಗಳನ್ನು ಪರಿಶೀಲಿಸಲು ಆಂತರಿಕ ತನಿಖಾ ತಂಡ ರಚಿಸುವುದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಸ್‌ಸಿ/ಎಸ್‌ಟಿ ನೌಕರರ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದು, ಅನುಕಂಪ ಆಧಾರಿತ ನೇಮಕಾತಿಗಳನ್ನು ಸಕಾಲ ವ್ಯಾಪ್ತಿಗೆ ತರುವುದು, ಸಂವಿಧಾನದ ಅನುಚ್ಛೇದ 16 ಮತ್ತು 16(4)ರ ಅಡಿಯಲ್ಲಿ ನ್ಯಾಯೋಚಿತ ಅವಕಾಶಗಳನ್ನು ಒದಗಿಸುವುದು, ಎಸ್‌ಸಿ/ಎಸ್‌ಟಿ ನೌಕರರಿಗೆ ಗೃಹ ಸಾಲ ಮುಂಗಡ ಸೌಲಭ್ಯ ಕಲ್ಪಿಸುವುದು ಹಾಗೂ ಉನ್ನತ ವ್ಯಾಸಂಗಕ್ಕಾಗಿ ವೇತನ ಸಹಿತ ರಜೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳು ಸೇರಿವೆ ಎಂದು ತಿಳಿಸಿದರು.
ಇನ್ನೂ ಈ ಬೇಡಿಕೆಗಳ ಸಂಪೂರ್ಣ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಮಹೇಶ ಹುಬ್ಬಳ್ಳಿ ಎಚ್ಚರಿಸಿದರು.
ಸಂಘದ ಹೋರಾಟಕ್ಕೆ ಸ್ಪಂದಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳಿಗಾಗಿ ಸಂಘದ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
