ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧದ ಪ್ರಕರಣ ಹಿಂಪಡೆಯಲುದೇವಿಂದ್ರ ದೇಸಾಯಿ ಕಲ್ಲೂರ ಆಗ್ರಹ

ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧದ ಪ್ರಕರಣ ಹಿಂಪಡೆಯಲುದೇವಿಂದ್ರ ದೇಸಾಯಿ ಕಲ್ಲೂರ ಆಗ್ರಹ

ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧದ ಪ್ರಕರಣ ಹಿಂಪಡೆಯಲು ಒತ್ತಾಯ

ಸತ್ಯ ಹೇಳಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ; ಹಿಂಪಡೆಯದಿದ್ದರೆ ಹೋರಾಟ: ದೇವಿಂದ್ರ ದೇಸಾಯಿ ಕಲ್ಲೂರ

ಕಲಬುರಗಿ : ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳಂದ ಪಟ್ಟಣದಲ್ಲಿ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧದ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿರುವುದು ಖಂಡನೀಯ. ಅನ್ಯ ಕೋಮಿನವರ ಓಲೈಕೆ ಮತ್ತು ತುಷ್ಟೀಕರಣ ರಾಜಕಾರಣದ ಭಾಗವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ತಮ್ಮ ಭಾಷಣದಲ್ಲಿ 1983-84ರ ಚುನಾವಣಾ ಸಂದರ್ಭದಲ್ಲಿ ಮಾಜಿ ಶಾಸಕ ಖಮರೂಲ್ ಇಸ್ಲಾಂ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಆದರೆ ಸತ್ಯವನ್ನು ಹೇಳಿದ ಕಾರಣಕ್ಕೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.

ಅಂದು ಮಾಜಿ ಕಾರ್ಮಿಕ ಸಚಿವರು ಖಮರೂಲ್ ಇಸ್ಲಾಂ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ ಪೊಲೀಸ್ ಇಲಾಖೆಯ ತನಿಖೆ ನಡೆದು, ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನೂ ಸಲ್ಲಿಸಿದ್ದರು ಎನ್ನಲಾಗಿದೆ. ಹಾಗಿದ್ದರೆ ಆ ಪ್ರಕರಣ ಸುಳ್ಳೇ? ತನಿಖೆ ಮತ್ತು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿ ಕೂಡ ಸುಳ್ಳೇ? ಎಂದು ಪ್ರಶ್ನಿಸಿದರು.

ದತ್ತಾತ್ರೇಯ ಪಾಟೀಲ ರೇವೂರ ಅವರು ಕೇವಲ ಐತಿಹಾಸಿಕ ಸಂಗತಿಗಳನ್ನು ಉಲ್ಲೇಖಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ಕಾಂಗ್ರೆಸ್ ಪಕ್ಷದ ಆತ್ಮವಂಚನೆಯಾಗಿದೆ ಎಂದು ಟೀಕಿಸಿದರು. ಮತದಾರರನ್ನು ದಾರಿ ತಪ್ಪಿಸುವ ಹಾಗೂ ಸಮಾಜವನ್ನು ವಿಭಜಿಸುವ ರಾಜಕಾರಣದ ಕುರಿತು ಅವರು ಪ್ರಸ್ತಾಪಿಸಿದ್ದರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ದಾಖಲಿಸಿರುವ ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ತುಷ್ಟೀಕರಣ ರಾಜಕಾರಣದ ಪರಿಣಾಮವಾಗಿದೆ. ಎಲ್ಲ ಧರ್ಮದವರನ್ನು ಸಮಾನವಾಗಿ ಕಾಣುವ ಮನೋಭಾವ ಸರ್ಕಾರದಲ್ಲಿದ್ದರೆ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟದಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಹೇಳಿದರು.

ಭಾರತದಲ್ಲಿ ಹುಟ್ಟಿ, ಭಾರತದ ಅನ್ನ ತಿನ್ನುತ್ತಾ ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುವವರನ್ನು ವಿರೋಧಿಸುವುದು ತಪ್ಪಲ್ಲ. ದೇಶಕ್ಕಿಂತ ಧರ್ಮ ಮೊದಲು ಎನ್ನುವ ಮನೋಭಾವವನ್ನು ವಿರೋಧಿಸುವುದು ಕೂಡ ತಪ್ಪಲ್ಲ. ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಸಮಾನ ಹಕ್ಕು ಮತ್ತು ಅವಕಾಶಗಳನ್ನು ನೀಡಿದೆ. ಆದರೆ ಸಂವಿಧಾನದ ಮೌಲ್ಯಗಳನ್ನು ಕಡೆಗಣಿಸಿ ಧರ್ಮಾಂಧತೆಯನ್ನು ಪ್ರೋತ್ಸಾಹಿಸುವುದು ಸರಿಯಲ್ಲ ಎಂದು ಹೇಳಿದರು.

ದೇಶದ ಹಿತಾಸಕ್ತಿ ಮತ್ತು ರಾಷ್ಟ್ರಭಕ್ತಿ ಪ್ರತಿಯೊಬ್ಬ ನಾಗರಿಕನ ಮೊದಲ ಆದ್ಯತೆಯಾಗಬೇಕು. ಧರ್ಮಕ್ಕಿಂತ ದೇಶ ಮುಖ್ಯ ಎಂಬ ಮನೋಭಾವ ಬೆಳೆಸಿಕೊಳ್ಳಬೇಕಿದೆ. ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಕಲಬುರಗಿ ನಗರ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೋರಾಟದ ಹಾದಿ ಹಿಡಿಯಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅಭಿಷೇಕ ಗುತ್ತೇದಾರ, ಅರವಿಂದ ಪೊದ್ದಾರ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.