ಚಿತ್ತಾಪುರದಲ್ಲಿ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ್‌ಗೆ ಅದ್ದೂರಿ ವಿಜಯೋತ್ಸವ ಸ್ವಾಗತ: ಹೂವಿನ ಮಳೆ, ಪಟಾಕಿ ಸಂಭ್ರಮ
ಚಿತ್ತಾಪುರದಲ್ಲಿ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ್‌ಗೆ ಅದ್ದೂರಿ ವಿಜಯೋತ್ಸವ ಸ್ವಾಗತ: ಹೂವಿನ ಮಳೆ, ಪಟಾಕಿ ಸಂಭ್ರಮ
ಕಲಬುರಗಿ : ಮೂರನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು.
ಚಿತ್ತಾಪುರ ತಾಲೂಕಿನ ಕೋಲಿ ಸಮಾಜದ ಯುವ ಅಧ್ಯಕ್ಷ ರಾಜೇಶ್ ಹೋಳಿಕಟ್ಟಿ ಅವರ ನೇತೃತ್ವದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಜೆಸಿಬಿ ಮೂಲಕ ಹೂವಿನ ಸುರಿಮಳೆಗೈದು, ಘೋಷಣೆಗಳ ನಡುವೆ ಕಮಕನೂರ್ ಅವರನ್ನು ಪಟ್ಟಣಕ್ಕೆ ಬರಮಾಡಿಕೊಳ್ಳಲಾಯಿತು.
ಬಳಿಕ ತಿಪ್ಪಣ್ಣಪ್ಪ ಕಮಕನೂರ್ ಅವರು ಶ್ರೀ ನಿಜಶರಣ ಅಂಬಿಗರ ಚೌಡಯ್ಯ, ಬಸವೇಶ್ವರ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ನಾಗಾವಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ನೂತನ ಎಂಎಲ್‌ಸಿಗೆ ಅಭಿನಂದನೆ ಸಲ್ಲಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ತಿಪ್ಪಣ್ಣಪ್ಪ ಕಮಕನೂರ್, ತಮ್ಮನ್ನು ಮೂರನೇ ಬಾರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಜನರ ನಿರೀಕ್ಷೆಗೆ ತಕ್ಕಂತೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
