ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಸೂಕ್ತ ಭದ್ರತೆ ಒದಗಿಸಿ: ಧ್ವನಿ ಸಂಘಟನೆ ಜಿಲ್ಲಾಡಳಿತಕ್ಕೆ ಆಗ್ರಹ
ವೀರೇಶ್ವರ ಪುಣ್ಯಾಶ್ರಮದ ಘನತೆಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಿ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಸೂಕ್ತ ಭದ್ರತೆ ಒದಗಿಸಿ: ಧ್ವನಿ ಸಂಘಟನೆ ಜಿಲ್ಲಾಡಳಿತಕ್ಕೆ ಆಗ್ರಹ
ಗದಗ (ಜೂನ್ 29): ಉತ್ತರ ಕರ್ನಾಟಕದ ಹೆಮ್ಮೆಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿರುವ ಗದಗದ ವೀರೇಶ್ವರ ಪುಣ್ಯಾಶ್ರಮದಲ್ಲಿ ಇತ್ತೀಚೆಗೆ ಬೆಳವಣಿಗೆಯಾಗುತ್ತಿರುವ ವಿವಾದಗಳು ಭಕ್ತ ಸಮುದಾಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ಆಶ್ರಮದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರು ತಮ್ಮ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಗದಗ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಗದಗ ಜಿಲ್ಲಾ ಗೌರವಾಧ್ಯಕ್ಷ ಅಂದಪ್ಪ ಮಾದರ ವೀರೇಶ್ವರ ಪುಣ್ಯಾಶ್ರಮವು ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇಂತಹ ಪವಿತ್ರ ಕ್ಷೇತ್ರದಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ಅಶಾಂತಿಗೆ ಅವಕಾಶ ನೀಡಬಾರದು. ಪೂಜ್ಯ ಶ್ರೀಗಳು ತಮ್ಮ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ತಕ್ಷಣವೇ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು.
ಆಶ್ರಮಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಆರೋಪ-ಪ್ರತ್ಯಾರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು.
ಆಶ್ರಮದ ಆಡಳಿತ, ಆಸ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು.
ಯಾವುದೇ ವ್ಯಕ್ತಿ ಅಥವಾ ಗುಂಪು ಆಶ್ರಮದ ಶಾಂತಿ ಪರಂಪರೆ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಗಾ ವಹಿಸಬೇಕು.
ಕೊನೆಯದಾಗಿ ಎಚ್ಚರಿಕೆ ನೀಡಿರುವ ಅಂದಪ್ಪ ಮಾದರ ಅವರು ಧರ್ಮ ನ್ಯಾಯ ಮತ್ತು ಸತ್ಯದ ಪರವಾಗಿ ನಿಲ್ಲುವುದು ನಮ್ಮ ಸಂಘಟನೆಯ ಕರ್ತವ್ಯವಾಗಿದೆ. ಜಿಲ್ಲಾಡಳಿತವು ಈ ವಿಷಯವನ್ನು ವಿಳಂಬವಿಲ್ಲದೆ ಪರಿಶೀಲಿಸಿ ನ್ಯಾಯಸಮ್ಮತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಭಕ್ತರು ಮತ್ತು ಸಾರ್ವಜನಿಕರೊಂದಿಗೆ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ನ್ಯಾಯಕ್ಕಾಗಿ..ಸಮಾಜಕ್ಕಾಗಿ... ಜನರ ಧ್ವನಿಯಾಗಿ
ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ
