ಯರಗೋಳ ಗ್ರಾಮದಲ್ಲಿ ಬಸ್ ನಿಲ್ದಾಣ ಮತ್ತು ಶೌಚಾಲಯದ ಕೊರತೆ – ಸಾರ್ವಜನಿಕರ ಆಕ್ರೋಶ
ಯರಗೋಳ ಗ್ರಾಮದಲ್ಲಿ ಬಸ್ ನಿಲ್ದಾಣ ಮತ್ತು ಶೌಚಾಲಯದ ಕೊರತೆ – ಸಾರ್ವಜನಿಕರ ಆಕ್ರೋಶ
ಯಾದಗಿರಿ ಜು. 6: ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯದ ಕೊರತೆಯಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಬಿಸಿಲು, ಮಳೆ ಮತ್ತು ಗಾಳಿಯ ನಡುವೆಯೇ ರಸ್ತೆ ಬದಿಯಲ್ಲಿ ನಿಂತು ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ ಇಲ್ಲದ ಕಾರಣ ಪ್ರಯಾಣಿಕರಿಗೆ ಯಾವುದೇ ಮೂಲಭೂತ ಸೌಲಭ್ಯಗಳು ಲಭ್ಯವಿಲ್ಲ.
ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯವೂ ಇಲ್ಲದಿರುವುದರಿಂದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶಾಶ್ವತ ಪರಿಹಾರ ಕಲ್ಪಿಸಿಲ್ಲ " ಎಂದು ಮಲ್ಲಿಕಾರ್ಜುನಗೌಡ ಕಟ್ಟಿಮನಿ ಮತ್ತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯರಗೋಳ ಗ್ರಾಮವು ಪ್ರಮುಖ ಸಂಪರ್ಕ ಗ್ರಾಮವಾಗಿರುವುದರಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚಾರ ಮಾಡುತ್ತಾರೆ. ಆದ್ದರಿಂದ ಗ್ರಾಮದಲ್ಲಿ ತಕ್ಷಣ ಸುಸಜ್ಜಿತ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಸರ್ಕಾರ ಮತ್ತು ಜಿಲ್ಲಾ ಆಡಳಿತಕ್ಕೆ ಒತ್ತಾಯಿಸಿದ್ದಾರೆ.
