ಶಹಾಬಾದ್ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಮನವಿ
ಶಹಾಬಾದ್ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಮನವಿ
ಕಲಬುರಗಿ : ಶಹಾಬಾದ್ ತಾಲೂಕು ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದು, ಮೂಲಭೂತ ಸೌಲಭ್ಯಗಳು ಹಾಗೂ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಹಾಬಾದ್ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಗನಿ ಸಬೀರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ ಶಹಾಬಾದ್ ತಾಲೂಕು ಕೇಂದ್ರವಾಗಿ ಘೋಷಣೆಯಾದ ಹಲವು ವರ್ಷಗಳಾದರೂ ತಾಲೂಕಿಗೆ ಅಗತ್ಯವಾದ ಸರ್ಕಾರಿ ಕಚೇರಿಗಳು, ಅಭಿವೃದ್ಧಿ ಯೋಜನೆಗಳು ಮತ್ತು ಮೂಲಸೌಕರ್ಯಗಳು ಸಮರ್ಪಕವಾಗಿ ಲಭ್ಯವಾಗಿಲ್ಲ ಎಂದು ಆರೋಪಿಸಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಯಡಿ ವಿಶೇಷ ಅನುದಾನ ಮೀಸಲಿದ್ದರೂ ಶಹಾಬಾದ್ ನಗರ ಹಾಗೂ ತಾಲೂಕಿಗೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 100 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸುವ ಘೋಷಣೆ ಇದುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಜೊತೆಗೆ ತಾಲೂಕಿನಲ್ಲಿ ಅಗ್ನಿಶಾಮಕ ದಳ ಕೇಂದ್ರವನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.
ಶಹಾಬಾದ್ ಹೊರವಲಯದಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ದೂರಲಾಗಿದೆ. ಸುಮಾರು 20 ಎಕರೆ ಸರ್ಕಾರಿ ಜಮೀನನ್ನು ಸರ್ಕಾರದ ಸ್ವಾಧೀನಕ್ಕೆ ಪಡೆದು ವಿಕಾಸ ಸೌಧ ನಿರ್ಮಿಸಬೇಕು ಎಂಬ ಬೇಡಿಕೆಯನ್ನೂ ಮನವಿಯಲ್ಲಿ ಮುಂದಿರಿಸಲಾಗಿದೆ.
ತಾಲೂಕಿನಲ್ಲಿದ್ದ ಸಿಮೆಂಟ್ ಕಾರ್ಖಾನೆ ಹಾಗೂ ಹೆವಿ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಗಳು ಎರಡು ದಶಕಗಳಿಗಿಂತ ಹೆಚ್ಚು ಕಾಲದಿಂದ ಸ್ಥಗಿತಗೊಂಡಿದ್ದು, ಅವುಗಳನ್ನು ಪುನರಾರಂಭಿಸಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಕೈಗಾರಿಕೆಗಳು ಹಾಗೂ ಕಲ್ಲು ಗಣಿಗಾರಿಕೆ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಹಾಬಾದ್ ತಾಲೂಕಿಗೆ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಿ, ಕೈಗಾರಿಕೆಗಳ ಪುನಶ್ಚೇತನ, ಉದ್ಯೋಗ ಸೃಷ್ಟಿ, ಆರೋಗ್ಯ ಮತ್ತು ಆಡಳಿತಾತ್ಮಕ ಸೌಲಭ್ಯಗಳ ವಿಸ್ತರಣೆಗೆ ಆದ್ಯತೆ ನೀಡುವಂತೆ ಅಬ್ದುಲ್ ಗನಿ ಸಬೀರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
