ಕಲ್ಯಾಣ ಕರ್ನಾಟಕದ ಇತಿಹಾಸ ಕುರಿತು ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಿ: ಜೇನವೆರಿ ವಿನೋದಕುಮಾರ ಆಗ್ರಹ
ಕಲ್ಯಾಣ ಕರ್ನಾಟಕದ ಇತಿಹಾಸ ಕುರಿತು ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಿ: ಜೇನವೆರಿ ವಿನೋದಕುಮಾರ ಆಗ್ರಹ
ಕಲಬುರಗಿ: ಕಲ್ಯಾಣ ಕರ್ನಾಟಕದ ಐತಿಹಾಸಿಕ ಹಿನ್ನೆಲೆ ಹಾಗೂ ನಿಜಾಮರ ಆಡಳಿತದಿಂದ ವಿಮೋಚನೆಗೊಂಡು ಭಾರತ ಒಕ್ಕೂಟದಲ್ಲಿ ಸೇರ್ಪಡೆಯಾದ ಇತಿಹಾಸಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಅನುಚ್ಛೇದ 171(3) ತಿದ್ದುಪಡಿ ಹೋರಾಟದ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ನ್ಯಾಯವಾದಿ ಜೇನವೆರಿ ವಿನೋದಕುಮಾರ ಆಗ್ರಹಿಸಿದ್ದಾರೆ.
ಈ ಕುರಿತು ಕಳೆದ ಒಂದು ದಶಕದಿಂದ ಸರ್ಕಾರಕ್ಕೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪ್ರತ್ಯೇಕವಾಗಿ ಸಂಕ್ಷಿಪ್ತ ವರದಿಗಳನ್ನು ಸಲ್ಲಿಸಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿಗಳು 17-05-2025ರಂದು, ವಿಜಯನಗರ ಜಿಲ್ಲಾಧಿಕಾರಿಗಳು 15-07-2025ರಂದು, ಯಾದಗಿರಿ ಜಿಲ್ಲಾಧಿಕಾರಿಗಳು 06-08-2025ರಂದು, ಬೀದರ್ ಜಿಲ್ಲಾಧಿಕಾರಿಗಳು 28-08-2025ರಂದು, ಕಲಬುರಗಿ ಜಿಲ್ಲಾಧಿಕಾರಿಗಳು 30-08-2025ರಂದು ಹಾಗೂ ರಾಯಚೂರು ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳು 03-09-2025ರಂದು ವರದಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ, ಪ್ರಾದೇಶಿಕ ಆಯುಕ್ತರು 15-09-2025ರಂದು ಏಳು ಜಿಲ್ಲೆಗಳ ವರದಿಗಳನ್ನು ಆಧರಿಸಿ ವಿಷಯವನ್ನು ಪರಿಗಣಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೂ ಈ ಮಹತ್ವದ ವಿಷಯದ ಕುರಿತು ಈ ಭಾಗದ ಜನಪ್ರತಿನಿಧಿಗಳು ಮತ್ತು ನಾಯಕರು ಸಮರ್ಪಕವಾಗಿ ಧ್ವನಿ ಎತ್ತದಿರುವುದು ವಿಷಾದನೀಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಜಾಮರ ಆಡಳಿತದಿಂದ ವಿಮೋಚನೆಗೊಂಡು ಭಾರತ ಒಕ್ಕೂಟದಲ್ಲಿ ಸೇರ್ಪಡೆಯಾದ ಕಲ್ಯಾಣ ಕರ್ನಾಟಕದ ಐತಿಹಾಸಿಕ ಹಿನ್ನೆಲೆಗೆ ಸಂಬಂಧಿಸಿದ ವರದಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ಸಲ್ಲಿಸಲಾದ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅದೇ ರೀತಿ, ಪ್ರಾದೇಶಿಕ ಆಯುಕ್ತರು ಏಳು ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಗಳ ಆಧಾರದ ಮೇಲೆ ಸಮಗ್ರ ವರದಿ (Consolidated Report) ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಹಾಗೂ ಅದರ ಪ್ರತಿಯನ್ನು ಮನವಿದಾರರಿಗೆ ನೀಡಬೇಕು ಎಂದು ಜೇನವೆರಿ ವಿನೋದಕುಮಾರ ಆಗ್ರಹಿಸಿದ್ದಾರೆ.
ಈ ವಿಷಯವನ್ನು ಇತ್ತೀಚೆಗೆ ನೂತನ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗಿದೆ. ಸರ್ಕಾರ ಮತ್ತು ಪ್ರಾದೇಶಿಕ ಆಯುಕ್ತರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ನೆನಪೋಲೆ ಸಲ್ಲಿಸುವ ಮೂಲಕ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
