ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಒತ್ತಾಯ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಒತ್ತಾಯ
ಕಲಬುರಗಿ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ತಕ್ಷಣವೇ ಚುನಾವಣೆ ನಡೆಸಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಕೈಗಾರಿಕಾ ಪ್ರಕೋಷ್ಠಕ ಸಹ ಸಂಚಾಲಕ ಮಲ್ಲಿಕಾರ್ಜುನ ಮರತೂರಕರ್ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗ್ರಾಮಗಳಲ್ಲಿ ಪ್ರಸ್ತುತ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದ್ದು, ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಚುನಾಯಿತ ಜನಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಸಾರ್ವಜನಿಕರ ಅಹವಾಲುಗಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.ಪ್ರಸ್ತುತ ಆಡಳಿತಾತ್ಮಕ ವ್ಯವಸ್ಥೆಯ ಲೋಪಗಳನ್ನು ಎತ್ತಿಹಿಡಿದಿರುವ ಅವರು, ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಸ್ಥಿತಿಯಲ್ಲಿ ಎರಡು-ಮೂರು ಗ್ರಾಮ ಪಂಚಾಯಿತಿಗಳಿಗೆ ಕೇವಲ ಒಬ್ಬರೇ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅವರು ವಾರ ಅಥವಾ ಹದಿನೈದು ದಿನಕ್ಕೊಮ್ಮೆ ಪಂಚಾಯಿತಿಗೆ ಭೇಟಿ ನೀಡಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗಣಕಯಂತ್ರ ಸಹಾಯಕರು ನೀಡುವ ಮಾಹಿತಿ ಮೇಲಷ್ಟೇ ಅಧಿಕಾರಿಗಳು ಅವಲಂಬಿತರಾಗಿದ್ದಾರೆ. ನೇರವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ನೈಜ ಪರಿಸ್ಥಿತಿಯನ್ನು ಪರಿಶೀಲಿಸದೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಭಾಗದ ಕುಡಿಯುವ ನೀರು ಸೇರಿದಂತೆ ವಿವಿಧ ತುರ್ತು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಅಧಿಕಾರಿಗಳ ಈ ಉಡಾಫೆಯ ಧೋರಣೆಯಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೂಡಲೇ ಚುನಾವಣೆಗಳನ್ನು ಘೋಷಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರನ್ನು ತರುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

