ಭೂಮಾನಂದ ಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹ ಆರೋಪಿಗಳಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಲು ಕರ್ನಾಟಕ ಮಾದಿಗರ ಸಂಘ ಆಗ್ರಹ
ಭೂಮಾನಂದ ಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹ ಆರೋಪಿಗಳಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಲು ಕರ್ನಾಟಕ ಮಾದಿಗರ ಸಂಘ ಆಗ್ರಹ
ಚಿಂಚೋಳಿ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ಮಾದಿಗ ಸಮಾಜದ ಯುವ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಭೂಮಾನಂದ ಅವರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕರ್ನಾಟಕ ಮಾದಿಗರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯರಾಜ್ ಕೊರಡಂಪಳ್ಳಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಭೂಮಾನಂದ ಅವರ ಅಮಾನುಷ ಹತ್ಯೆ ಅತ್ಯಂತ ಖಂಡನೀಯ, ಹೇಯ ಹಾಗೂ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ದುಷ್ಕೃತ್ಯವಾಗಿದೆ. ಈ ಘಟನೆ ದಲಿತ ಸಮುದಾಯದ ಭದ್ರತೆ ಹಾಗೂ ರಾಜ್ಯದ ಕಾನೂನು-ಸುವ್ಯವಸ್ಥೆಯ ಕುರಿತು ಗಂಭೀರ ಆತಂಕ ಮೂಡಿಸಿದೆ ಎಂದು ತಿಳಿಸಿದ್ದಾರೆ.
ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಜೀವಿಸುವ ಹಕ್ಕು, ಸಮಾನತೆ ಹಾಗೂ ಭದ್ರತೆಯ ಹಕ್ಕನ್ನು ಖಾತರಿಪಡಿಸಿದೆ. ಇಂತಹ ಸಂದರ್ಭದಲ್ಲಿ ಸಮಾಜದಲ್ಲಿ ಈ ರೀತಿಯ ಅಮಾನುಷ ಕೃತ್ಯಗಳು ನಡೆಯುತ್ತಿರುವುದು ಅತ್ಯಂತ ವಿಷಾದನೀಯವಾಗಿದ್ದು, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹತ್ಯೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಿ, ಶೀಘ್ರ ಗತಿಯಲ್ಲಿ ನ್ಯಾಯಾಲಯದ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಅಲ್ಲದೆ, ಮೃತ ಭೂಮಾನಂದ ಅವರ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಿ, ಸರ್ಕಾರದಿಂದ ಸಮರ್ಪಕ ಪರಿಹಾರ ಧನ ಮಂಜೂರು ಮಾಡಬೇಕು. ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಕುಟುಂಬದ ಸಾಮಾಜಿಕ ಹಾಗೂ ಆರ್ಥಿಕ ಸಂಕಷ್ಟವನ್ನು ಮಾನವೀಯ ದೃಷ್ಟಿಯಿಂದ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡುವ ನಿಟ್ಟಿನಲ್ಲಿ ದೃಢವಾದ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.
ಪ್ರಮುಖ ಬೇಡಿಕೆಗಳು
- ಭೂಮಾನಂದ ಹತ್ಯೆ ಪ್ರಕರಣದ ಕುರಿತು ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು.
- ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು.
- ಮೃತರ ಕುಟುಂಬಕ್ಕೆ ಸಮರ್ಪಕ ಪರಿಹಾರ ಧನ ಮಂಜೂರು ಮಾಡಬೇಕು.
- ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು.
- ಮೃತರ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಒದಗಿಸಬೇಕು.
- ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು.
– ವಿಜಯರಾಜ್ ಕೊರಡಂಪಳ್ಳಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಮಾದಿಗರ ಸಂಘ, ಕಲಬುರಗಿ

