ವಿಷಾಹಾರ ಪ್ರಕರಣದ ಸಿ.ಒ.ಡಿ ತನಿಖೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ವಿಷಾಹಾರ ಪ್ರಕರಣದ ಸಿ.ಒ.ಡಿ ತನಿಖೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಕಲಬುರಗಿ: ದಂಡೋತಿ ಹಾಗೂ ಕರಜಗಿ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಸಿ.ಒ.ಡಿ ತನಿಖೆ ನಡೆಸಬೇಕು ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದಂಡೋತಿ ಮತ್ತು ಕರಜಗಿ ಘಟನೆಗಳ ಹಿನ್ನೆಲೆಯಲ್ಲಿ ವಸತಿ ಶಾಲೆಗಳಿಗೆ ಕಳಪೆ ಗುಣಮಟ್ಟದ ಆಹಾರ ಸರಬರಾಜಾಗುತ್ತಿರುವ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಇಂದಿರಾಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕ್ರೈಸ್ ವಸತಿ ಶಾಲೆಗಳಲ್ಲಿ ಆಹಾರ ಸರಬರಾಜು ಸೇರಿದಂತೆ ವಿವಿಧ ಹಂತಗಳಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಆಹಾರ ಸಾಮಗ್ರಿಗಳ ಖರೀದಿ, ದುರಸ್ತಿ ಕಾಮಗಾರಿ, ಆಹಾರ ಸರಬರಾಜಿನ ಟೆಂಡರ್ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ವಿದ್ಯಾರ್ಥಿಗಳ ಪ್ರವೇಶ ಹಾಗೂ ಅಡುಗೆ ಸಿಬ್ಬಂದಿ ನೇಮಕಾತಿಯಲ್ಲಿಯೂ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಕ್ರೈಸ್ ವಸತಿ ನಿಲಯಗಳ ನೌಕರರಿಗೆ ವೇತನ ಪಾವತಿಸಲು ಕಳೆದ ನಾಲ್ಕು ವರ್ಷಗಳಿಂದ ಟೆಂಡರ್ ಕರೆಯದೆ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿಯೂ ಕಳೆದ ಐದು ವರ್ಷಗಳಿಂದ ಟೆಂಡರ್ ಪ್ರಕ್ರಿಯೆ ನಡೆಸದೆ ಮುಂದುವರಿಸಿರುವ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಕನಿಷ್ಠ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಮೇ ಮತ್ತು ಜೂನ್ ತಿಂಗಳ ವೇತನವನ್ನು ಪರಿಷ್ಕೃತ ದರದಲ್ಲಿ ಪಾವತಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿಯೂ ಜೂನ್ ತಿಂಗಳ ವೇತನ ಪಾವತಿಸಲಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಅದೇ ರೀತಿ ಕ್ರೈಸ್ತ ವಸತಿ ನಿಲಯ ಮೂರು ತಿಂಗಳಿಂದ ಹಾಗೂ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ನಿಲಯಗಳ ನೌಕರರಿಗೆ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸರ್ಕಾರ ಜಾರಿಗೊಳಿಸಿದ್ದ ಕನಿಷ್ಠ ವೇತನ ಆದೇಶವನ್ನು ಹಿಂಪಡೆದಿರುವುದು ಖಂಡನೀಯವಾಗಿದ್ದು, ಕೂಡಲೇ ಆದೇಶವನ್ನು ಮರುಜಾರಿಗೊಳಿಸಿ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರಿಗೆ ಪರಿಷ್ಕೃತ ವೇತನ ನೀಡಬೇಕು ಎಂದು ಆಗ್ರಹಿಸಿದರು.
ದಂಡೋತಿ ಮತ್ತು ಕರಜಗಿ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳ ವಿಷಾಹಾರ ಪ್ರಕರಣದ ಬಗ್ಗೆ ವಿಸ್ತೃತ ಸಿ.ಒ.ಡಿ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಬೇಡಿಕೆಗಳು ಈಡೇರುವವರೆಗೆ ಇಂದು ಬೆಳಿಗ್ಗೆ 11 ಗಂಟೆಗೆ (ಆಗಸ್ಟ್ 11) ರಿಂದ ಜಿಲ್ಲಾ ಪಂಚಾಯಿತಿ ಕಚೇರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು
ನಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಈಡೇರಿಸುವಂತೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾಧ್ಯಕ್ಷ ಪರಶುರಾಮ, ಜಿಲ್ಲಾ ಉಪಾಧ್ಯಕ್ಷ ಮೇಪರಾಜ ಕಠಾರೆ, ಜಿಲ್ಲಾಕಾರ್ಯದರ್ಶಿ ಮಮ್ಮದ ಜಮೀರೊದ್ದಿನ್ ಬಾಬಾ, ಸಹಕಾರ್ಯದರ್ಶಿ ಅಲ್ಲಾಪಟೇಲ ವಾಡಿ, ತಾಲೂಕು ಅಧ್ಯಕ್ಷ ರಾಮಚಂದ್ರ ಪವಾರ, ಆಫಜಲಪುರ ತಾಲೂಕು ಅಧ್ಯಕ್ಷ ಭಾಬು ಹೊಸಮನಿ ಸೇರಿದಂತೆ ಕಲ್ಯಾಣಿ ಮಾಜಾರಿ, ಮಲ್ಲಮ್ಮ, ನಾಗರತ್ನ ಮಧನಕರ್ ಹಾಗೂ ಇತರರು ಭಾಗವಹಿಸಿದ್ದರು.

