ಬರಪೀಡಿತ ಜಿಲ್ಲೆಗಳ ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ
ಬರಪೀಡಿತ ಜಿಲ್ಲೆಗಳ ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ
ಕಲಬುರಗಿ: ಸಮರ್ಪಕ ಮಳೆಯಾಗದೆ ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರಪೀಡಿತ ಜಿಲ್ಲೆಗಳ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಜೈ ಕನ್ನಡಿಗರ ಸೇನೆ (ರಿ) ಸಂಸ್ಥಾಪಕ ಅಧ್ಯಕ್ಷ ಡಾ. ದತ್ತು ಹೆಚ್. ಭಾಸಗಿ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು , ಈ ಸಂದರ್ಭದಲ್ಲಿ ದಕ್ಷಿಣ ಮತ್ತು ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಇದ್ದರು,
ಮಳೆಯ ಕೊರತೆಯಿಂದ ತೊಗರಿ, ಉದ್ದು, ಸೋಯಾ, ಹೆಸರು ಸೇರಿದಂತೆ ಮುಂಗಾರು ಬೆಳೆಗಳ ಬಿತ್ತನೆ ಹಾಗೂ ಇಳುವರಿ ಮೇಲೆ ತೀವ್ರ ಪರಿಣಾಮ ಬೀರಿದೆ. ರೈತರು, ಕೃಷಿ ಕೂಲಿಕಾರ್ಮಿಕರು ಮತ್ತು ಬಡಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಉದ್ಯೋಗ ಅರಸಿ ಮಹಾರಾಷ್ಟ್ರ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಮಾರ್ಗಸೂಚಿಯನ್ವಯ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಜೊತೆಗೆ ಜಾನುವಾರುಗಳಿಗೆ ತಕ್ಷಣವೇ ಗಂಜಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರ ಈ ಬೇಡಿಕೆಗಳ ಕುರಿತು ಶೀಘ್ರ ಕ್ರಮ ಕೈಗೊಳ್ಳದಿದ್ದರೆ, ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಡಾ. ದತ್ತು ಹೆಚ್. ಭಾಸಗಿ ಎಚ್ಚರಿಕೆ ನೀಡಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಹುಲ್ ಶಂಕರ, ಕೃಷ್ಣ ಅಣ್ಣೆರಾವ, ಅಕ್ಷಯ, ಸಂತೋಷ ಬೆಳೆಪ್ಪ ಮಾಂಗ್, ಭಾಗೇಶ ತಂದೆ ಧರ್ಮಣ್ಣ, ಪ್ರಕಾಶ ನಿಂಗಪ್ಪ, ಜಗತ್ ಸಿಂಗ್ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

