ಡಿ. ದೇವರಾಜ ಅರಸು ಹಿಂದುಳಿದವರ ಧೀಮಂತ ನಾಯಕ: ಚಂದ್ರಿಕಾ
ಡಿ. ದೇವರಾಜ ಅರಸು ಹಿಂದುಳಿದವರ ಧೀಮಂತ ನಾಯಕ: ಚಂದ್ರಿಕಾ
ಕಲಬುರಗಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಧೀಮಂತ ನಾಯಕರಾಗಿದ್ದು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಹೇಳಿದರು.
ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ನಿಮಿತ್ತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಹಾಂತೇಶ ಕೌಜಲಗಿ ಮಾತನಾಡಿ, ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸುವ ಮೂಲಕ ಬಡ ರೈತರು ಹಾಗೂ ಭೂಹೀನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಅರಸು ಅವರು, ಎಲ್.ಜಿ. ಹಾವನೂರು ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ದಾರಿ ಮಾಡಿಕೊಟ್ಟರು. ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ ಎಂದರು.
ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ದಯಾನಂದ ಅಗಸರ ವಿಶೇಷ ಉಪನ್ಯಾಸ ನೀಡಿ. ಡಿ. ದೇವರಾಜ ಅರಸು ಅವರು ಮೈಸೂರು ಅರಸು ಮನೆತನದವರಾಗಿದ್ದು, 1915ರ ಆಗಸ್ಟ್ 20ರಂದು ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಜನಿಸಿದರು. 1941ರಲ್ಲಿ ರಾಜಕೀಯ ಪ್ರವೇಶಿಸಿದ ಅವರು, ತಮ್ಮ 25ನೇ ವಯಸ್ಸಿನಲ್ಲಿ ಹುಣಸೂರು ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಯಲ್ಲಿ ಜಯಗಳಿಸಿದರು. ಎರಡು ಅವಧಿಗಳಲ್ಲಿ ಒಟ್ಟು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅರಸು ಅವರು, ಬಡವರು, ದೀನದಲಿತರು, ಹಿಂದುಳಿದವರು ಹಾಗೂ ಕಡುಬಡವರ ಕಲ್ಯಾಣಕ್ಕಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದರು ಎಂದು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಅಶೋಕ್ ಡೈಮಂಡ್ ಹಾಗೂ ಡಾ. ಸಿ.ಸಿ. ನಿಂಗಣ್ಣ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಜಗದೇವಪ್ಪ, ದೇವರಾಜ ಅರಸು ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಜೇನವೆರೀ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಂಗಮೇಶ್ವರ, ಸಮುದಾಯ ಮುಖಂಡರಾದ ಕುಮಾರ್ ಯಾದವ್, ಶೇಖರ್ ಸಿಂಗ್, ಅರುಣ್ ಕುಮಾರ್, ಮೈಬೂಬ್ ದರ್ವೇಸಿ, ಮಾಂತೇಶ್, ಶಿವಲಿಂಗಪ್ಪ, ಚಂದ್ರಶೇಖರ್ ಗುಂಡಳ್ಳಿ, ಮಲ್ಲೇಶ್ ಯಾದವ್, ಶ್ರೀಕಾಂತ್ ಬಿರಾದರ್, ವೆಂಕಟೇಶ್ ನೀರಡಗಿ, ನಾಗಪ್ಪ ಎಳವಾರ್, ಜ್ಯೋತಿ ಅಡಕಿ, ಧರ್ಮವೀರ್ ಪಟ್ಟಣ್, ಸ್ವಾಮಿ ದುರ್ಬುರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದೇವರಾಜ ಅರಸು ಅಭಿಮಾನಿಗಳ ಬಳಗದ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಭವ್ಯ ಭಾವಚಿತ್ರ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್, ದೇವರಾಜ ಅರಸು ಜಯಂತಿ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಜೇನ್ವೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಂಗಮೇಶ್ವರ ಸೇರಿದಂತೆ ಅಧಿಕಾರಿಗಳು, ವಿವಿಧ ಕಲಾ ತಂಡಗಳ ಕಲಾವಿದರು ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
“ಸಮಾನತೆ, ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಅವಕಾಶಗಳ ಸಮಾನ ಹಂಚಿಕೆಯ ಮೂಲಕ ಎಲ್ಲರನ್ನೂ ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವುದೇ ಡಿ. ದೇವರಾಜ ಅರಸು ಅವರಿಗೆ ಸಲ್ಲಿಸುವ ನಿಜವಾದ ಗೌರವ.”
ವಿನೋದ್ ಕುಮಾರ್ ಜೇನ್ವೇರಿ, ಅಧ್ಯಕ್ಷರು, ಡಿ. ದೇವರಾಜ ಅರಸು ಜಯಂತಿ ಆಚರಣೆ ಸಮಿತಿ

