ಜೇವರ್ಗಿ–ಯಡ್ರಾಮಿ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಪರಶುರಾಮ ಒತ್ತಾಯ
ಜೇವರ್ಗಿ–ಯಡ್ರಾಮಿ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಪರಶುರಾಮ ಬಿಳವಾರ ಒತ್ತಾಯ
ರೈತರ ಸಂಕಷ್ಟಕ್ಕೆ ಕೇಂದ್ರ, ರಾಜ್ಯ ಸರ್ಕಾರ ಸ್ಪಂದಿಸಲಿ
ಕಲಬುರಗಿ: ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜೇವರ್ಗಿ ಮತ್ತು ಯಡ್ರಾಮಿ ಅವಳಿ ತಾಲೂಕುಗಳ ರೈತರ ಸಮಸ್ಯೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ, ಎರಡೂ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಜೇವರ್ಗಿ–ಯಡ್ರಾಮಿ ಭಾಗದ ಅನೇಕ ಗ್ರಾಮಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತು ವರದಿ ಪಡೆಯುವುದಕ್ಕೆ ಸೀಮಿತವಾಗದೆ, ರೈತರ ಹೊಲಗಳಿಗೆ ಖುದ್ದಾಗಿ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಲಾಗಿದೆ.
ಅನ್ನ ಬೆಳೆಯುವ ರೈತನ ನೋವನ್ನು ಕೇವಲ ಅಂಕಿ-ಅಂಶಗಳಿಂದ ಅಳೆಯಲು ಸಾಧ್ಯವಿಲ್ಲ. ರೈತ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ, ಕೃಷಿ ಉಳಿದರೆ ಮಾತ್ರ ದೇಶದ ಆಹಾರ ಭದ್ರತೆ ಉಳಿಯುತ್ತದೆ. ಆದ್ದರಿಂದ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದು ಒತ್ತಾಯಿಸಲಾಗಿದೆ.
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಿಗೆ ವಿಶೇಷ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ಬೆಳೆ ನಷ್ಟದ ಕುರಿತು ವೈಜ್ಞಾನಿಕ ಹಾಗೂ ಪಾರದರ್ಶಕ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ವಿಳಂಬವಿಲ್ಲದೆ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಉಂಟಾಗಿರುವ ತಾರತಮ್ಯವನ್ನು ನಿವಾರಿಸಿ, ನಷ್ಟ ಅನುಭವಿಸಿದ ಪ್ರತಿಯೊಬ್ಬ ಅರ್ಹ ರೈತನಿಗೂ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಅಗತ್ಯ ಮೇವು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಲಾಗಿದೆ.
“ಇದು ಯಾವುದೇ ರಾಜಕೀಯ ಬೇಡಿಕೆಯಲ್ಲ. ಇದು ಅನ್ನದಾತನ ಬದುಕಿನ ಪ್ರಶ್ನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಣ್ಣು ತೆರೆದು ಜೇವರ್ಗಿ–ಯಡ್ರಾಮಿ ರೈತರ ಸಂಕಷ್ಟವನ್ನು ಅರಿತು, ಅವರ ಧ್ವನಿಗೆ ತಕ್ಷಣ ಸ್ಪಂದಿಸಬೇಕು” ಎಂದು ಪರಶುರಾಮ್ ಬಿಳವಾರ. ಉಪಾದ್ಯಕ್ಷರು, ಶ್ರೀ ಸಿದ್ದರಾಮೆಶ್ವರ ಗ್ರಾಮಿಣ ಅಭಿವೃದ್ಧಿ ಸೆವಾ ಸಮಿತಿ ಒತ್ತಾಯಿಸಲಾಗಿದೆ.

