ಕಲಬುರಗಿ ಹೋಟೆಲ್‌ಗಳಲ್ಲಿ ಸ್ವಚ್ಛತೆ, ಶೌಚಾಲಯ ಕಡ್ಡಾಯಗೊಳಿಸಿ: ಜೆಡಿಎಸ್ ಆಗ್ರಹ
ಕಲಬುರಗಿ ಹೋಟೆಲ್‌ಗಳಲ್ಲಿ ಸ್ವಚ್ಛತೆ, ಶೌಚಾಲಯ ಕಡ್ಡಾಯಗೊಳಿಸಿ: ಜೆಡಿಎಸ್ ಆಗ್ರಹ
ಕಲಬುರಗಿ: ನಗರದ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ಗ್ರಾಹಕರಿಂದ ಮನಬಂದಂತೆ ದರ ವಸೂಲಿ ಮಾಡುವುದನ್ನು ನಿಯಂತ್ರಿಸಬೇಕು ಎಂದು ಜಿಲ್ಲಾ ಜಾತ್ಯತೀತ ಜನತಾದಳ (ಎಸ್) ಆಗ್ರಹಿಸಿದೆ.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷ ಬಾಬರ್ ಮುಸ್ತಪ್ಪ ಮಾತನಾಡಿ, ಕಲಬುರಗಿ ನಗರದ ಹಲವು ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ದುಬಾರಿ ದರ ವಿಧಿಸುತ್ತಿದ್ದರೂ ಶುದ್ಧ RO ನೀರು, ಸ್ವಚ್ಛತೆ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುತ್ತಿಲ್ಲ ಎಂದು ಆರೋಪಿಸಿದರು.
ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಹಾನಗರ ಪಾಲಿಕೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಿಂದ ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಕಲಬುರಗಿಗೆ ಆಗಮಿಸುವ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಪರವಾನಗಿ ನೀಡುವ ಬದಲು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ನಿಯಮಾನುಸಾರವಿದ್ದಲ್ಲಿ ಮಾತ್ರ ಪರವಾನಗಿ ನೀಡಬೇಕು. ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿ ರದ್ದುಪಡಿಸಿ, ಅಗತ್ಯ ಸೌಲಭ್ಯ ಕಲ್ಪಿಸುವ ಮಾಲೀಕರಿಗೆ ಮಾತ್ರ ಪರವಾನಗಿ ನೀಡಬೇಕು ಎಂದು ಹೇಳಿದರು.
ಜೆಡಿಎಸ್‌ನ ಪ್ರಮುಖ ಬೇಡಿಕೆಗಳು: ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸುವುದು, ಶುದ್ಧ RO ಕುಡಿಯುವ ನೀರು ಒದಗಿಸುವುದು, ಗುಣಮಟ್ಟದ ಹಾಗೂ ಸುರಕ್ಷಿತ ಆಹಾರ ನೀಡುವುದು ಮತ್ತು ಗ್ರಾಹಕರ ಮೇಲಿನ ಅನಗತ್ಯ ವೆಚ್ಚದ ಹೊರೆ ಕಡಿಮೆ ಮಾಡುವುದು.
ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಹಾನಗರ ಪಾಲಿಕೆ ಕಚೇರಿ ಎದುರು ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೀರಬಿಟ್ಟಿ, ರಾಜಕುಮಾರ್ ಬಡದಾಳ, ನಾಗಣ್ಣ ವಾರದ, ನಾಗೇಶ್ ಹೆಬ್ಬಾಳ, ದೇವೇಂದ್ರಪ್ಪ ಹಸನಾಪುರ, ಯೇಸು ನಾಥ್, ಸಂಜು ಮಡಿಕೆ, ಗಂಗಾಧರ್ ಪಂಚಾಳ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

