ಪಶುಸಂಗೋಪನಾ ಪಾಲಿಟೆಕ್ನಿಕ್ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ
ಪಶುಸಂಗೋಪನಾ ಪಾಲಿಟೆಕ್ನಿಕ್ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ
ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಸಮೀಪದ ಕರ್ನಾಟಕ ಪಶುವೈದ್ಯಕೀಯ,ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದ ಪಶುಸಂಗೋಪನಾ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಪ್ರದೀಪ ಅಣಬಿ ಅವರು ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ದೋರನಹಳ್ಳಿ ಪಶುಸಂಗೋಪನಾ ಪಾಲಿಟೆಕ್ನಿಕ್ನಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು,ಅವರಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರು ಕೇಳಿಬಂದಿದೆ.ದೂರದ ಹಾಗೂ ವಿವಿಧ ಜಿಲ್ಲೆಗಳಿಂದ ಉತ್ತಮ ಶಿಕ್ಷಣದ ನಿರೀಕ್ಷೆಯೊಂದಿಗೆ ಕಾಲೇಜಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ
ವಿದ್ಯಾರ್ಥಿಗಳಿಗಾಗಿ ವಸತಿನಿಲಯವಿದ್ದರೂ,ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳು ಸರಬರಾಜಾಗಿದ್ದರೂ ಅವು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ.ಅಲ್ಲದೆ,ಕಟ್ಟಡಕ್ಕೆ ಸಂಬಂಧಿಸಿದ ದುರಸ್ತಿ ಹಾಗೂ ಇತರ ಕಾಮಗಾರಿಗಳು ಪೂರ್ಣಗೊಂಡು ಸುಮಾರು ಆರು ತಿಂಗಳು ಕಳೆದಿದ್ದರೂ,ಕಟ್ಟಡದ ಬಳಕೆ ಮತ್ತು ಕಾರ್ಯನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳು ಮುಂದುವರಿದಿವೆ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಕಾಲೇಜಿನ ಪ್ರಾಂಶುಪಾಲರನ್ನು ವಿಚಾರಿಸಿದಾಗ,ಈ ವಿಷಯಗಳು ವಿಶ್ವವಿದ್ಯಾಲಯದ ಕುಲಸಚಿವರ ವ್ಯಾಪ್ತಿಗೆ ಬರುತ್ತವೆ ಎಂಬ ಉತ್ತರ ದೊರೆತಿದೆ ಎಂದು ಪ್ರದೀಪ ಅಣಬಿ ತಿಳಿಸಿದ್ದಾರೆ.ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಸ್ಪರ ಜವಾಬ್ದಾರಿ ವರ್ಗಾಯಿಸುವ ಬದಲು, ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು,ಕೈಗೊಂಡ ಕ್ರಮದ ವರದಿಯನ್ನು ಮನವಿದಾರರಿಗೆ ನೀಡಬೇಕು.ಇಲ್ಲವಾದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಪ್ರದೀಪ ಅಣಬಿ ಎಚ್ಚರಿಸಿದ್ದಾರೆ.

