ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ಪಿಡಿಒ ವಿರುದ್ಧ ಕ್ರಮಕ್ಕೆ ಪಾಟೀಲ ಆಗ್ರಹ
ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ಪಿಡಿಒ ವಿರುದ್ಧ ಕ್ರಮಕ್ಕೆ ಪಾಟೀಲ ಆಗ್ರಹ
ಕಲಬುರಗಿ: ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆ, ಮೂಲಭೂತ ಸೌಕರ್ಯಗಳು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಸಮರ್ಪಕವಾಗಿ ಕಾಮಗಾರಿಗಳನ್ನು ಒದಗಿಸುತ್ತಿಲ್ಲ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ
ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯ ಆರೋಪಿಸಿದ್ದಾರೆ. ಅಯ್ಯಣಗೌಡ ಮಲ್ಲಣಗೌಡ ಪಾಟೀಲ್ ಅವರು ಒತ್ತಾಯಿಸಿದ್ದಾರೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿಯಮಿತವಾಗಿ ಕಚೇರಿಗೆ ಹಾಜರಾಗುತ್ತಿಲ್ಲ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸಲು ದೂರವಾಣಿ ಮೂಲಕ ಸಂಪರ್ಕಿಸಿದರೂ ಕರೆ ಸ್ವೀಕರಿಸುತ್ತಿಲ್ಲ. ಇದರಿಂದ ಗ್ರಾಮಸ್ಥರು ತಮ್ಮ ಕೆಲಸಗಳಿಗಾಗಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದ್ದಾರೆ.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಸ್ವಚ್ಛತೆಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದ್ದು, ಸರ್ಕಾರದ ಯೋಜನೆಗಳ ಪ್ರಯೋಜನ ಮತ್ತು ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಅಕ್ಟೋಬರ್ 9ರಂದು ಕಲಬುರಗಿಯ ಸಂಬಂಧಪಟ್ಟ ಆಡಳಿತ ಶಾಖೆಗೆ ಮನವಿ ಸಲ್ಲಿಸಿ, ಪಿಡಿಒ ಅವರ ಕಚೇರಿ ಹಾಜರಾತಿ, ಕರ್ತವ್ಯ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಸೇವೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು. ಲೋಪಗಳು ದೃಢಪಟ್ಟಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರಿಗೆ ಕುಡಿಯುವ ನೀರು, ಸ್ವಚ್ಛತೆ, ಮೂಲಭೂತ ಸೌಕರ್ಯಗಳು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

