ಶಾಲೆಯ ಬಳಿ ಇರುವ ವಿದ್ಯುತ್ ಟವರ್ ಸ್ಥಳಾಂತರಿಸಲು ಮನವಿ
ಶಾಲೆಯ ಬಳಿ ಇರುವ ವಿದ್ಯುತ್ ಟವರ್ ಸ್ಥಳಾಂತರಿಸಲು ಮನವಿ
ಕಲಬುರಗಿ: ನಗರದ ಶಿವಾಜಿನಗರದಲ್ಲಿರುವ ಶ್ರೀ ವೆಂಕಟೇಶ್ವರ ಇಂಗ್ಲಿಷ್ ಮಾಧ್ಯಮ ಶಾಲೆಯ ಸಮೀಪವಿರುವ ವಿದ್ಯುತ್ ಟವರ್ನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ ಮಾರ್ಗದರ್ಶನದಲ್ಲಿ ಹಾಗೂ ಕಲಬುರಗಿ ನಗರ ಘಟಕದ ಅಧ್ಯಕ್ಷ ಸುರೇಶ ಜಿ. ಹೊಸಮನಿ ಅವರ ನೇತೃತ್ವದಲ್ಲಿ ಸೇಡಂ ರಸ್ತೆಯ ಕೆಪಿಟಿಸಿಎಲ್ ಕಚೇರಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಾಲೆಯಲ್ಲಿ ಸುಮಾರು 400ರಿಂದ 500 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯ ಸುತ್ತಮುತ್ತ ಪ್ರತಿನಿತ್ಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ. ಅಲ್ಲದೆ, ಈ ರಸ್ತೆಯಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ಶಾಲೆಯ ಸಮೀಪದಲ್ಲಿರುವ ವಿದ್ಯುತ್ ಟವರ್ನಿಂದ ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅನಾಹುತ ಸಂಭವಿಸುವ ಮುನ್ನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಮುಖಂಡರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಟವರ್ನ್ನು ಸಂಚಾರಕ್ಕೆ ಅಡಚಣೆಯಾಗದ ಸೂಕ್ತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

