ಮತ ಬಚಾವೋ–ದೇಶ್ ಬಚಾವೋ ಅಭಿಯಾನಕ್ಕೆ ಕಾಂಗ್ರೆಸ್ ಕರೆ
ಮತ ಬಚಾವೋ–ದೇಶ್ ಬಚಾವೋ ಅಭಿಯಾನಕ್ಕೆ ಕಾಂಗ್ರೆಸ್ ಕರೆ
ಕಲಬುರಗಿ: ಮತದಾನದ ಹಕ್ಕಿನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿರುವ ‘ಮತ ಬಚಾವೋ–ದೇಶ್ ಬಚಾವೋ’ ಅಭಿಯಾನದ ಅಂಗವಾಗಿ ಕಲಬುರಗಿ ವಿಭಾಗದ ಸಭೆ ನಗರದ ಸೇಡಂ ರಸ್ತೆಯ ಖಾಸಗಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಗೋಪಿನಾಥ ಪಳನಿಯಪ್ಪನ್ ಮಾತನಾಡಿದರು. ಮತದಾನದ ಹಕ್ಕಿನ ಮಹತ್ವ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಅಭಿಯಾನದ ಉದ್ದೇಶಗಳ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಕಲ್ಯಾಣ ಕರ್ನಾಟಕ ಭಾಗದ ಅಭಿಯಾನದ ಉಸ್ತುವಾರಿ ವೀಕ್ಷಕರಾದ ಕೇಂದ್ರದ ಮಾಜಿ ಸಚಿವ ಹಾಗೂ ಎಐಸಿಸಿ ಕಾರ್ಯದರ್ಶಿ ಜಿ.ಡಿ. ಸೀಲಂ ಅವರು ಮಾತನಾಡಿ, ಮತದಾನದ ಹಕ್ಕಿನ ರಕ್ಷಣೆಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ಮಾತನಾಡಿ, ಅಭಿಯಾನವನ್ನು ವಿಭಾಗದಾದ್ಯಂತ ಪರಿಣಾಮಕಾರಿಯಾಗಿ ಸಂಘಟಿಸುವ ಅಗತ್ಯವನ್ನು ಒತ್ತಿಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕಿರಣ ದೇಶಮುಖ, ಶಾಸಕರಾದ ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಚಂದ್ರಶೇಖರ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮಾಜಿ ಶಾಸಕ ಡಿ.ಎಸ್. ಹೊಲಗೇರಿ, ಕಾಂಗ್ರೆಸ್ ಮುಖಂಡ ಸುಭಾಷ್ ರಾಥೋಡ ಸೇರಿದಂತೆ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖಂಡರು ಉಪಸ್ಥಿತರಿದ್ದರು.

