ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು: 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು: 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಕಲಬುರಗಿ ಜಿಲ್ಲಾ ಘಟಕದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಅಕ್ಟೋಬರ್ 31ರಂದು ನಗರದ ಕನ್ನಡ ಭವನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಗೌರವಾಧ್ಯಕ್ಷ ಬೆಳ್ಳಪ್ಪ ಇಂಗನಕಲ್ ಹಾಗೂ ಜಿಲ್ಲಾಧ್ಯಕ್ಷ ಮೋಹನ್ ಆರ್.ಸಿ. ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಮಣ್ಣೂರು ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರೂಕ್ ಮಣ್ಣೂರು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಫಾರೂಕ್ ಮಣ್ಣೂರು ಅವರು, ಕನ್ನಡ ಭಾಷೆ ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಇಂದಿನ ಯುವಜನರಲ್ಲಿ ಕನ್ನಡದ ಬಗ್ಗೆ ಅಭಿಮಾನ ಬೆಳೆಸುವುದರ ಜೊತೆಗೆ ದೈನಂದಿನ ಜೀವನದಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.
ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಅವಣ್ಣಗೌಡ ಪಾಟೀಲ ಮಾತನಾಡಿ, ಕನ್ನಡ ಭಾಷೆ ಮತ್ತು ನೆಲದ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ರಾಜ್ಯೋತ್ಸವವು ಕೇವಲ ಆಚರಣೆಗೆ ಸೀಮಿತವಾಗದೆ ಕನ್ನಡದ ಅಸ್ಮಿತೆ, ಸ್ವಾಭಿಮಾನ ಹಾಗೂ ಸಂಸ್ಕೃತಿಯನ್ನು ಉಳಿಸುವ ಸಂಕಲ್ಪದ ದಿನವಾಗಬೇಕು. ಕನ್ನಡಿಗರ ಹಕ್ಕುಗಳ ರಕ್ಷಣೆ, ಕನ್ನಡಿಗರಿಗೆ ಉದ್ಯೋಗಾವಕಾಶಗಳ ಆದ್ಯತೆ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗಾಗಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಗಣ್ಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಸವರಾಜ ದಂಡಪ್ಪಗೋಳ, ಸಂತೋಷ ಪಾಳ, ನಾಗರಾಜ ಗಾಯಕವಾಡ, ಶ್ರೀಕಾಂತ ಗಂಗಾ ಡಿಸ್ಟ್ರಿಬ್ಯೂಷನ್ ಹಾಗೂ ಶೇಕ್ ಮೆಹಬೂಬ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

