ಕನ್ನಡ ಪ್ರೀತಿ ತೋರಿಕೆಯಾಗದಿರಲಿ: ಶಾಸಕ ಪ್ರಭು ಚವ್ಹಾಣ

ಕನ್ನಡ ಪ್ರೀತಿ ತೋರಿಕೆಯಾಗದಿರಲಿ: ಶಾಸಕ ಪ್ರಭು ಚವ್ಹಾಣ

ಔರಾದನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕನ್ನಡ ಪ್ರೀತಿ ತೋರಿಕೆಯಾಗದಿರಲಿ: ಶಾಸಕ ಪ್ರಭು ಚವ್ಹಾಣ

ಕನ್ನಡದ ಮೇಲಿನ ಪ್ರೀತಿ ಕೇವಲ ತೋರಿಕೆಗೆ ಸೀಮಿತವಾಗಬಾರದು. ಅದು ಪ್ರತಿಯೊಬ್ಬರ ಅಂತರಾಳದಿAದ ಮೂಡಿಬರಬೇಕು. ಕನ್ನಡ ಮಾತನಾಡುವುದಷ್ಟೇ ಅಲ್ಲ, ನಮ್ಮ ನೆಲ, ಜಲ, ಭಾಷೆ, ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯನ್ನು ಉಳಿಸಿ ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲ್ಲೂಕು ಆಡಳಿತದ ವತಿಯಿಂದ ನ.1ರಂದು ಔರಾದ (ಬಿ) ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡದ ಗೌರವಕ್ಕೆ ಧಕ್ಕೆಯಾಗುವಂತಹ ವರ್ತನೆ ಯಾರಿಂದಲೂ ಆಗಬಾರದು. ಕೊರಳಿಗೆ ಕನ್ನಡ ಶಾಲು ಹಾಕಿಕೊಂಡು ಮದ್ಯಪಾನ ಮಾಡಿ ಕುಣಿಯುವುದು ಅಥವಾ ಕನ್ನಡ ಬಾವುಟಕ್ಕೆ ಅಗೌರವ ತೋರುವುದನ್ನು ಅಲ್ಲಲ್ಲಿ ಕಾಣುತ್ತಿದ್ದೇವೆ. ಇದು ಕನ್ನಡ ಪ್ರೇಮ ಎನಿಸಿಕೊಳ್ಳುವುದಿಲ್ಲ. ನಮ್ಮ ನೆಲ, ಜಲ, ಭಾಷೆ, ಬಾವುಟ ಮತ್ತು ನಾಡಿನ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಮರಾಠಿ ಭಾಷೆಯ ಪ್ರಭಾವ ಹೆಚ್ಚಿರುವ ಪ್ರದೇಶದಲ್ಲಿ ಜನಿಸಿದ ನನಗೆ ಬಾಲ್ಯದಲ್ಲಿ ಕನ್ನಡ ಶಾಲೆಗಳ ಕೊರತೆಯಿಂದ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವ ಅವಕಾಶ ದೊರೆಯಲಿಲ್ಲ. ಆದರೆ ಶಾಸಕನಾದ ನಂತರ ಕ್ಷೇತ್ರದಲ್ಲಿ ಕನ್ನಡ ಮಾಧ್ಯಮದ ಶಾಲೆಗಳನ್ನು ಆರಂಭಿಸುವುದು, ಅಗತ್ಯ ಶಿಕ್ಷಕರನ್ನು ನೇಮಿಸುವುದು ಸೇರಿದಂತೆ ಕನ್ನಡ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ತಾಲ್ಲೂಕು ಮತ್ತು ವಲಯ ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು, ಕನ್ನಡದ ಸಾಹಿತಿ ಮತ್ತು ಕಲಾವಿದರನ್ನು ಗೌರವಿಸುವುದು ಮತ್ತು ಕನ್ನಡಪರ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಕ್ಷೇತ್ರದಲ್ಲಿ ಕನ್ನಡದ ವಾತಾವರಣ ನಿರ್ಮಿಸಲು ನಿರಂತರವಾಗಿ ಶ್ರಮಿಸಿದ್ದೇನೆ ಎಂದರು.

ಈ ಪ್ರಯತ್ನಗಳ ಫಲವಾಗಿ ಕ್ಷೇತ್ರದಲ್ಲಿ ಗಣನೀಯ ಬದಲಾವಣೆ ಕಂಡುಬAದಿದೆ. ಹಿಂದೆ ಕನ್ನಡ ಮಾತನಾಡಲು ಹಿಂಜರಿಯುತ್ತಿದ್ದ ಮತ್ತು ಮರಾಠಿಯಲ್ಲಿಯೇ ಮಾತನಾಡಬೇಕೆಂದು ಒತ್ತಾಯಿಸುತ್ತಿದ್ದ ಜನರು ಇಂದು ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದ ಶಿಕ್ಷಕರನ್ನು ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ಇದು ಕನ್ನಡ ಭಾಷೆಯ ಬೆಳವಣಿಗೆಗೆ ದೊರೆತಿರುವ ಮಹತ್ವದ ಯಶಸ್ಸಾಗಿದ್ದು, ಇಂತಹ ಬದಲಾವಣೆಗಳನ್ನು ಕಂಡಾಗ ಅಪಾರ ಸಂತೋಷ ಮತ್ತು ಹೆಮ್ಮೆ ಉಂಟಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿ:

ಔರಾದ(ಬಿ) ಪಟ್ಟಣ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ 560 ಕೋಟಿ ಮೊತ್ತದ 36 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ಔರಾದ (ಬಿ) ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 84 ಕೋಟಿ ರೂ. ವೆಚ್ಚದ ಯೋಜನೆಯನ್ನೂ ರೂಪಿಸಲಾಗಿದೆ. ಸರ್ಕಾರದ ನಿರ್ಲಕ್ಷö್ಯದಿಂದ 3-4 ವರ್ಷಗಳಾದರೂ ಕೆಲಸವಾಗುತ್ತಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸುತ್ತಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸುವ ಮನವಿ ಪತ್ರಗಳಿಗೆ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗಾಗಿ ಸಲ್ಲಿಸಿದ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಹಾಕಲಾಗುತ್ತಿದೆ ಎಂದು ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ವಿಶೇಷ ಉಪನ್ಯಾಸ ನೀಡಿದ ನಾಗಮಾರಪಳ್ಳಿ ಪ್ರೌಢಶಾಲೆಯ ಶಿಕ್ಷಕ ಜಗನ್ನಾಥ ದೇಶಮುಖ ಮಾತನಾಡಿ, ಕನ್ನಡ ನಾಡು ವೈಭವಪೂರ್ಣ ಇತಿಹಾಸ, ಶ್ರೀಮಂತ ಸಾಹಿತ್ಯ ಮತ್ತು ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ವೀರಾಧಿವೀರರು, ಮಹಾನ್ ಕವಿಗಳು, ಸಾಹಿತಿಗಳು, ದಾರ್ಶನಿಕರು ಹಾಗೂ ಮೇಧಾವಿಗಳನ್ನು ಕಂಡ ಪುಣ್ಯಭೂಮಿ ನಮ್ಮ ಕನ್ನಡ ನಾಡು. ಇಂತಹ ಮಹನೀಯರ ಸಾಧನೆ ಮತ್ತು ಕೊಡುಗೆಗಳಿಂದ ಕನ್ನಡ ನಾಡು ದೇಶದಲ್ಲೇ ವಿಶಿಷ್ಟ ಗುರುತನ್ನು ಪಡೆದುಕೊಂಡಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿ, ಔರಾದ(ಬಿ) ಇತಿಹಾಸಕ್ಕೆ ಸಂಬAಧಿಸಿದ ಅಮರೇಶ್ವರ ದೇವಸ್ಥಾನದಲ್ಲಿರುವ ಶಾಸನಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷೆಗಾಗಿ ಔರಾದನ ಅನೇಕರು ಸಾಕಷ್ಟು ಶ್ರಮಿಸಿದ್ದಾರೆ. ಕನ್ನಡಪರ ಹೋರಾಟಗಾರರು ಮತ್ತು ಸಾಧಕರ ಕುರಿತು ಇಂದಿನ ಪೀಳಿಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ತಹಸೀಲ್ದಾರ್ ಮಹೇಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರೇಮಸಾಗರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಾರುತಿ ರಾಠೋಡ, ತಾಲ್ಲೂಕು ಆರೋಗ್ಯಾಧಿಕಾರಿ ಅನೀಲಕುಮಾರ ಎಕಲಾರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಸಂಘ-ಸAಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ಪತ್ರಕರ್ತ ಶರಣಪ್ಪ ಚಿಟ್ಮೆ, ಶಿಕ್ಷಕ ಗೋವಿಂದ ಪಾಟೀಲ, ಜಾನಪದ ಕಲಾವಿದ ಚಂದ್ರಕಾAತ ಧಬಾಲೆ ಹಾಗೂ ಸಿಪಿಐ ರಘುವೀರಸಿಂಗ್ ಠಾಕೂರ್ ಅವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಪ್ರಶಾಂತ ಮಾದಪ್ಪ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಾಧಕ ವಿದ್ಯಾರ್ಥಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಸಕ ಪ್ರಭು ಚವ್ಹಾಣ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ ವಂದಿಸಿದರು.