ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಶಾಸಕ ಪ್ರಭು ಚವ್ಹಾಣ
ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಶಾಸಕ ಪ್ರಭು ಚವ್ಹಾಣ
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ಈ ವಿಷಯದಲ್ಲಿ ನಿರ್ಲಕ್ಷö್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಎಚ್ಚರಿಕೆ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನ.2 ರಂದು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಈ ವರ್ಷ ಸರಾಸರಿಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದು, ಎಲ್ಲ ಕಡೆ ಬರ ಪರಿಸ್ಥಿತಿ ಆವರಿಸಿದೆ. ಬೇಸಿಗೆಗೂ ಮುನ್ನವೇ ಬಹಳಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯುಂಟಾಗಿದ್ದು, ಜನತೆ ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ಸಮಸ್ಯೆ ತೀವ್ರವಾಗಿರುವ ಕಡೆ ತಕ್ಷಣ ಟ್ಯಾಂಕರ್ ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಜನತೆ ನೀರು ಪೂರೈಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಗಮನಿಸಬೇಕು. ತಮ್ಮ ಮೊಬೈಲ್ ಫೋನ್‌ಗಳನ್ನು ಚಾಲ್ತಿಯಲ್ಲಿಟ್ಟು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಬೇಕು. ಮೊಬೈಲ್ ಸ್ವಿಚ್ ಆಫ್ ಇಡುವುದು, ಅಗೌರವದಿಂದ ಮಾತನಾಡುವುದು ಅಥವಾ ಅಸಭ್ಯತೆಯಿಂದ ನಡೆದುಕೊಳ್ಳುವುದು ಎಲ್ಲಿಯಾದರೂ ಕಂಡುಬAದಲ್ಲಿ ನಾನು ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಶಾಸಕರು ಗ್ರಾಮ ಪಂಚಾಯಿತಿವಾರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿ ತೊಂದರೆ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ಮಾಹಿತಿ ಪಡೆದರು. ತುರ್ತಾಗಿ ಪರಿಹಾರ ಕಂಡುಕೊಳ್ಳಲು ಏನು ಮಾಡಿದ್ದೀರಿ ಮತ್ತು ಮತ್ತೆ ಯಾವ ಯೋಜನೆಗಳನ್ನು ಹಾಕಿಕೊಂಡಿದ್ದೀರಿ ಎಂದು ವಿವರಣೆ ಪಡೆದರು. ಎಲ್ಲ ಅಧಿಕಾರಿಗಳು ಮಾಹಿತಿ ನೀಡಿದರು.
ನೀರಿನ ಸಂಪನ್ಮೂಲಗಳ ಕೊರತೆಯಿರುವ ಮತ್ತು ಸಮಸ್ಯೆ ತೀವ್ರವಾಗಿರುವ ಎಲ್ಲ ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ನೀರು ಒದಗಿಸಬೇಕು. ಜನ ಸಂಪನ್ಮೂಲಗಳು ಇರುವ ಕಡೆ ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಮೋಟಾರ್ ಕೆಟ್ಟಿದೆ. ವಾಟರ್ ಮೆನ್ ಕೆಲಸ ಮಾಡುತ್ತಿಲ್ಲ. ವಿದ್ಯುತ್ ತಂತಿ ಕೆಟ್ಟುಹೋಗಿದೆ ಎನ್ನುವ ಸಣ್ಣ ಪುಟ್ಟ ಕಾರಣಗಳನ್ನು ನೀಡಿ ನೀರು ಪೂರೈಕೆ ಸ್ಥಗಿತಗೊಳಿಸಿರುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.
ಸಭೆಯಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ಅಮಿತಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾಯ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
*ಶಾಸಕರ ಕಛೇರಿಯಲ್ಲಿ ಸಹಾಯವಾಣಿ ಆರಂಭ:* ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಶಾಸಕರಾದ ಪ್ರಭು ಬಿ.ಚವ್ಹಾಣ ಅವರ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ಔರಾದ(ಬಿ) ಮತ್ತು ಕ ಕಮಲನಗರ ತಾಲ್ಲೂಕಿನ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬAದರೆ ದೂರವಾಣಿ: 9108708774/7090157920 ಸಂಖ್ಯೆಗೆ ಕರೆ ಮಾಡಬಹುದು.

