ಔರಾದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ 2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ --

ಔರಾದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ 2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ --

ಔರಾದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ

2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ

ಔರಾದ(ಬಿ) ಪಟ್ಟಣದಲ್ಲಿ ತಲೆದೋರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ 2.5 ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ಔರಾದ (ಬಿ) ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಒತ್ತಾಯಿಸಿದರು.

ಔರಾದ(ಬಿ) ತಾಲ್ಲೂಕಿನ ತೇಗಂಪೂರ ಗ್ರಾಮದ ಕೆರೆಗೆ ನವೆಂಬರ್ 1 ರಂದು ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕರು ಸಚಿವರಿಗೆ ಮನವಿ ಪತ್ರ ಸಲ್ಲಿಸಿ, ಔರಾದ ಪಟ್ಟಣಕ್ಕೆ ಈ ಹಿಂದೆ ತೇಗಂಪೂರ ಕೆರೆಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ, ಹಾಲಹಳ್ಳಿಯಿಂದ ನೀರು ಪೂರೈಕೆ ಆರಂಭವಾದ ನಂತರ ತೇಗಂಪೂರ ಕೆರೆ ನೀರು ಸರಬರಾಜು ಯೋಜನೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಮೋಟಾರ್‌ಗಳು, ಪೈಪ್‌ಲೈನ್ ಸೇರಿದಂತೆ ಸಂಪೂರ್ಣ ವ್ಯವಸ್ಥೆ ಹಾಳಾಗಿದೆ ಎಂದು ವಿವರಣೆ ನೀಡಿದರು.

ಪ್ರಸ್ತುತ ಮಾಂಜ್ರಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಅಲ್ಲಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನರು ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಔರಾದ ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕ ನೀರು ಪೂರೈಸಲು ತೇಗಂಪೂರ ಕೆರೆಯಲ್ಲಿ ಅಗತ್ಯ ಸಾಮರ್ಥ್ಯದ ಮೋಟಾರ್‌ಗಳನ್ನು ಅಳವಡಿಸಿ, ಔರಾದ ಪಟ್ಟಣದವರೆಗೆ ಹೊಸ ಪೈಪ್‌ಲೈನ್ ವ್ಯವಸ್ಥೆ ಕಲ್ಪಿಸಬೇಕಿದೆ. ಈ ಕಾಮಗಾರಿಗಳಿಗೆ ಅಂದಾಜು 2.5 ಕೋಟಿ ಅನುದಾನ ಅಗತ್ಯವಿದ್ದು, ಕೂಡಲೇ ಅನುದಾನ ಒದಗಿಸುವಂತೆ ಶಾಸಕರು ಮನವಿ ಮಾಡಿದರು.

ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಸಂಬAಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆಯಾಗಿರುವ 30 ಲಕ್ಷ ಅನುದಾನದ ಪ್ರಸ್ತಾವನೆಗೆ ಮಂಜೂರಾತಿ ನೀಡುವಂತೆ ಮತ್ತು ತಮ್ಮ ಇಲಾಖೆಯಿಂದ 50 ಲಕ್ಷ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೌಖಿಕ ನಿರ್ದೇಶನ ನೀಡಿದರು. ಅಲ್ಲದೆ, ಔರಾದ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂದಿನ ಮೂರು ದಿನಗಳೊಳಗಾಗಿ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಂಡು ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿನ ನೀರಿನ ಸಮಸ್ಯೆಗೆ ಪರಿಹಾರ: ಕ್ಷೇತ್ರದಾದ್ಯಂತ ಬರಗಾಲ ಆವರಿಸಿದ್ದು, ಬಹಳಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆದ ಕಾಮಗಾರಿ ಯಶಸ್ವಿಯಾಗಿ ನಡೆದಿಲ್ಲ. ಹಾಗಾಗಿ ನಿರೀಕ್ಷೆಯಂತೆ ನೀರು ಪೂರೈಕೆಯಾಗುತ್ತಿಲ್ಲ. ಹಾಗಾಗಿ ವಿಶೇಷವಾಗಿ ಗ್ರಾಮೀಣ ಭಾಗದ ಊರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಟ 1 ಕೋಟಿ ಅನುದಾನ ಒದಗಿಸಬೇಕೆಂದು ಶಾಸಕ ಪ್ರಭು ಚವ್ಹಾಣ ಅವರು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಪ್ರತಿ ಪಂಚಾಯಿತಿಗೆ 50 ಲಕ್ಷದಿಂದ 1 ಕೋಟಿ ವರೆಗೆ ಅನುದಾನ ಒದಗಿಸುವ ಭರವಸೆ ನೀಡಿದರು.

ಇದೇ ವೇಳೆ ಕಾರಂಜಾ ಜಲಾಶಯದಿಂದ ನೀರೆತ್ತಿ ಔರಾದ(ಬಿ) ಮತ್ತು ಕಮಲನಗರ ತಾಲ್ಲೂಕು ವ್ಯಾಪ್ತಿಯ 36 ಕೆರೆಗಳನ್ನು ತುಂಬಿಸುವ 560.70 ಕೋಟಿ ಮೊತ್ತದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕಾರಂಜಾ ಜಲಾಶಯದಿಂದ ಔರಾದ(ಬಿ) ಪಟ್ಟಣ ಹಾಗೂ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ 84 ಕೋಟಿ ಮೊತ್ತದ ಯೋಜನೆಯ ಕಾಮಗಾರಿಯೂ ನಡೆಯುತ್ತಿಲ್ಲ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. 

ಈ ಯೋಜನೆಗಳು ಪೂರ್ಣಗೊಂಡಿದ್ದರೆ ಔರಾದ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಾಗುತ್ತಿರಲಿಲ್ಲ. ಮತ್ತು ರೈತರು ಸಂತೋಷದಿಂದ ಇರುತ್ತಿದ್ದರು. ಇನ್ನಾದರೂ ಈ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ ಕ್ಷೇತ್ರದ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.