ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಾಗಲಿಂಗಯ್ಯ ಮಠಪತಿ ಆಗ್ರಹ
ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಾಗಲಿಂಗಯ್ಯ ಮಠಪತಿ ಆಗ್ರಹ
ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಲು ಸಚಿವರಿಗೆ ವೀರಶೈವ-ಲಿಂಗಾಯತ ಮಹಾಸಭಾದಿಂದ ಮನವಿ
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಸುಕ್ಷೇತ್ರ ರಟಕಲ್ (ರೇವಗ್ಗಿ) ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನ ಇತಿಹಾಸ ಹಾಗೂ ಧಾರ್ಮಿಕ ಪರಂಪರೆ ಹೊಂದಿರುವ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿದೆ. ಕರ್ನಾಟಕ ಸೇರಿದಂತೆ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಪ್ರತಿವರ್ಷ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಆದರೆ, ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ತೀವ್ರ ತೊಂದರೆಯಾಗುತ್ತಿದೆ.
ದೇವಸ್ಥಾನದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯದ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಈ ದೇವಸ್ಥಾನವು 'ಎ' ದರ್ಜೆಯ ದೇವಾಲಯವಾಗಿದ್ದು, ಪ್ರತಿವರ್ಷ ಲಕ್ಷಾಂತರ ರೂಪಾಯಿ ಆದಾಯ ಹೊಂದಿದೆ. ಆದಾಗ್ಯೂ, ಭಕ್ತರಿಗೆ ಶುದ್ಧ ಕುಡಿಯುವ ನೀರು, ಸುಸಜ್ಜಿತ ವಸತಿ ಕೊಠಡಿಗಳು, ಸ್ನಾನಗೃಹಗಳು ಹಾಗೂ ಶೌಚಾಲಯ ಸೇರಿದಂತೆ ಕನಿಷ್ಠ ಮೂಲಸೌಕರ್ಯಗಳ ಕೊರತೆ ಇರುವುದು ವಿಷಾದನೀಯ ಎಂದು ಮಹಾಸಭಾದ ಕಾರ್ಯದರ್ಶಿ ನಾಗಲಿಂಗಯ್ಯ ಮಠಪತಿ ಅವರು ಸಚಿವರ ಗಮನ ಸೆಳೆದರು.
ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಪರಿಸರವು ಪ್ರಕೃತಿಯ ಸೊಬಗಿನಿಂದ ಕೂಡಿದ್ದು, ಅತ್ಯಂತ ಸುಂದರವಾಗಿದೆ. ದೇವಸ್ಥಾನದ ಜೊತೆಗೆ ಬೆಟ್ಟದ ಪರಿಸರವನ್ನೂ ಸಮಗ್ರವಾಗಿ ಅಭಿವೃದ್ಧಿಪಡಿಸಿದರೆ, ಈ ಕ್ಷೇತ್ರವನ್ನು ಧಾರ್ಮಿಕ ಯಾತ್ರಾ ಸ್ಥಳದ ಜೊತೆಗೆ ಆಕರ್ಷಕ ಪ್ರವಾಸಿ ತಾಣವನ್ನಾಗಿಯೂ ರೂಪಿಸಬಹುದು. ಆದ್ದರಿಂದ ಸರ್ಕಾರ ವಿಶೇಷ ಆಸಕ್ತಿ ವಹಿಸಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಸಚಿವ ಕೆ.ಎಸ್. ಬಸವಂತಪ್ಪ ಅವರು, ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಭಕ್ತಾದಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಅಭಿವೃದ್ಧಿ ಪ್ರಾಧಿಕಾರ ರಚಿಸುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

