ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ನೀಡದಿದ್ದರೆ ಕಾನೂನು ಹೋರಾಟ: ಆನಂದ್ ಎಸ್. ದೊಡ್ಮನಿ
ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ನೀಡದಿದ್ದರೆ ಕಾನೂನು ಹೋರಾಟ: ಆನಂದ್ ಎಸ್. ದೊಡ್ಮನಿ
ಕಲಬುರಗಿ: ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ತಾರತಮ್ಯ ತೋರುವ ಸಂಸ್ಥೆಗಳ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲಾ ಅಧ್ಯಕ್ಷ ಆನಂದ್ ಎಸ್. ದೊಡ್ಮನಿ ಎಚ್ಚರಿಕೆ ನೀಡಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಕರ್ನಾಟಕದ ನೆಲ, ಜಲ, ಭಾಷೆ, ನೀರು, ವಿದ್ಯುತ್ ಹಾಗೂ ಮೂಲಸೌಕರ್ಯಗಳ ಪ್ರಯೋಜನ ಪಡೆಯುತ್ತಿರುವ ಖಾಸಗಿ ಸಂಸ್ಥೆಗಳು ಈ ನಾಡಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳು, ಐಟಿ-ಬಿಟಿ ಕಂಪನಿಗಳು ಸೇರಿದಂತೆ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಆದರೆ, ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ನಿರ್ಲಕ್ಷ್ಯ ಹಾಗೂ ತಾರತಮ್ಯ ನಡೆಯುತ್ತಿರುವುದು ವಿಷಾದನೀಯ. ಈ ಕುರಿತು ಸಂಸ್ಥೆಗಳಿಂದ ನೇಮಕಾತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿ, ವಾಸ್ತವಾಂಶಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಕನ್ನಡಿಗರ ಉದ್ಯೋಗದ ಹಕ್ಕುಗಳ ರಕ್ಷಣೆಗಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಿಂದ ಒಂದು ತಿಂಗಳ ಕಾಲ ರಾಜ್ಯವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಐಟಿ-ಬಿಟಿ ಸೇರಿದಂತೆ ಎಲ್ಲ ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸಿ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲಾಗುವುದು. ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಸೂಕ್ತ ಅವಕಾಶ ಮತ್ತು ಆದ್ಯತೆ ನೀಡುವಂತೆ ಸಂಸ್ಥೆಗಳಿಗೆ ಒತ್ತಾಯಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ್ ಕಟ್ಟಿಮನಿ, ಮೈತಾಬ್ ಖಾನ್, ಶಂಭುಲಿಂಗ ಕುಲಕರ್ಣಿ, ಅಪ್ಪು ಕ್ಷತ್ರಿ, ಎಲ್ಲಪ್ಪ ಬಂಕಲಗಿ, ಯಲ್ಲಾಲಿಂಗ, ಮೌನೇಶ್ ಹಾಗೂ ಶ್ರೀಕಾಂತ್ ಉಪಸ್ಥಿತರಿದ್ದರು.
ಕನ್ನಡ ಭಾಷೆ, ನೆಲ ಮತ್ತು ಜಲದ ರಕ್ಷಣೆಗಾಗಿ ಹೋರಾಟ ನಡೆಸಿದ ಕನ್ನಡಪರ ಕಾರ್ಯಕರ್ತರ ವಿರುದ್ಧ ಸರ್ಕಾರ ಮೂರು ಪ್ರಕರಣಗಳನ್ನು ದಾಖಲಿಸಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಆನಂದ ದೊಡ್ಡಮನಿ.

