ಛಲವಾದಿ ನಾರಾಯಣಸ್ವಾಮಿ ನಿವಾಸದ ಮೇಲಿನ ದಾಳಿ ಯತ್ನ ಖಂಡಿಸಿ ಮುಖ್ಯಮಂತ್ರಿಗಳಿಗೆ ಮನವಿ

ಛಲವಾದಿ ನಾರಾಯಣಸ್ವಾಮಿ ನಿವಾಸದ ಮೇಲಿನ ದಾಳಿ ಯತ್ನ ಖಂಡಿಸಿ ಮುಖ್ಯಮಂತ್ರಿಗಳಿಗೆ ಮನವಿ

ಛಲವಾದಿ ನಾರಾಯಣಸ್ವಾಮಿ ನಿವಾಸದ ಮೇಲಿನ ದಾಳಿ ಯತ್ನ ಖಂಡಿಸಿ ಮುಖ್ಯಮಂತ್ರಿಗಳಿಗೆ ಮನವಿ

ಬೀದರ: ಪ್ರಜಾಪ್ರಭುತ್ವದಲ್ಲಿ ಬೆದರಿಕೆ ಹಾಗೂ ಹಿಂಸೆಗೆ ಅವಕಾಶವಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರ ನಿವಾಸದ ಬಳಿ ನಡೆದಿರುವ ಬೆದರಿಕೆ ಹಾಗೂ ದಾಳಿ ಯತ್ನದ ಆರೋಪವನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಡಾ. ಬಿ.ಆರ್. ಅಂಬೇಡ್ಕರ್ ಸೈನ್ಯದ ಬೀದರ್ ಜಿಲ್ಲಾಧ್ಯಕ್ಷ ಮಚೇಂದ್ರನಾಥ ಕಾಂಬಳೆ ಆಗ್ರಹಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸದ ಬಳಿ ನಡೆದಿರುವ ಬೆದರಿಕೆ ಹಾಗೂ ದಾಳಿ ಯತ್ನದ ಘಟನೆ ಆತಂಕಕಾರಿಯಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ವ್ಯಕ್ತವಾಗಬೇಕೇ ಹೊರತು ಬೆದರಿಕೆ, ದಾಳಿ ಹಾಗೂ ಭಯದ ವಾತಾವರಣ ಸೃಷ್ಟಿಸುವ ಮೂಲಕ ಅಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಅವರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ. ಆದರೆ ಹಿಂಸೆ ಮತ್ತು ಬೆದರಿಕೆಗಳಿಗೆ ಯಾವುದೇ ಸ್ಥಾನವಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಚೇಂದ್ರನಾಥ ಕಾಂಬಳೆ ಒತ್ತಾಯಿಸಿದರು.