ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು - ಶಶೀಲ್ ಜಿ. ನಮೋಶಿ

ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು - ಶಶೀಲ್ ಜಿ. ನಮೋಶಿ

ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು - ಶಶೀಲ್ ಜಿ. ನಮೋಶಿ

ಕಲಬುರಗಿ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘವು ಪ್ರೌಢಶಾಲಾ ಶಿಕ್ಷಕರ ವಿವಿಧ ಸೇವಾ ಸಮಸ್ಯೆಗಳು ಹಾಗೂ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗಾಗಿ ಶಿಕ್ಷಣ ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿನ ಬೇಡಿಕೆಗಳು ಶಿಕ್ಷಕರ ನ್ಯಾಯಯುತ ಹಕ್ಕುಗಳಿಗೆ ಸಂಬಂಧಿಸಿದ ಮಹತ್ವದ ವಿಷಯಗಳಾಗಿವೆ. ಈ ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯುವ ಜೊತೆಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಶಶೀಲ್ ಜಿ. ನಮೋಶಿ ತಿಳಿಸಿದ್ದಾರೆ.

ಶಿಕ್ಷಕರ ಸೇವಾ ಸಮಸ್ಯೆಗಳು, ಬಡ್ತಿ ಪ್ರಕ್ರಿಯೆ, ವರ್ಗಾವಣೆ, ನೇಮಕಾತಿ, ಶಿಕ್ಷಕರ ಹುದ್ದೆಗಳ ಭರ್ತಿ, ಸೇವಾ ನಿಯಮಗಳಲ್ಲಿನ ತೊಂದರೆಗಳು ಹಾಗೂ ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಸಂಘವು ಸಲ್ಲಿಸಿರುವ ಮನವಿಯಲ್ಲಿ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಶಿಕ್ಷಕರ ಸಮಸ್ಯೆಗಳಿಗೆ ದೀರ್ಘಕಾಲದಿಂದ ಪರಿಹಾರ ದೊರಕದಿರುವುದು ಶಿಕ್ಷಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಸರ್ಕಾರ ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಶಿಕ್ಷಕರು ಸಮಾಜದ ನಿರ್ಮಾತೃಗಳಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರಿಗೆ ನ್ಯಾಯಯುತ ಸೇವಾ ಸೌಲಭ್ಯಗಳು, ಸಮಯೋಚಿತ ಬಡ್ತಿ, ವರ್ಗಾವಣೆಯಲ್ಲಿ ನ್ಯಾಯ, ಖಾಲಿ ಹುದ್ದೆಗಳ ಭರ್ತಿ ಹಾಗೂ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಆಡಳಿತಾತ್ಮಕ ಕ್ರಮಗಳು ದೊರೆತಾಗ ಮಾತ್ರ ಶಿಕ್ಷಣ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘವು ಸಲ್ಲಿಸಿರುವ ಮನವಿಯಲ್ಲಿನ 14 ಪ್ರಮುಖ ಬೇಡಿಕೆಗಳನ್ನು ಸರ್ಕಾರ ಆದ್ಯತೆಯಿಂದ ಪರಿಶೀಲಿಸಿ, ಶಿಕ್ಷಕರಿಗೆ ನ್ಯಾಯ ಒದಗಿಸಬೇಕು. ಶಿಕ್ಷಕರ ಸೇವಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಿಕ್ಷಕರ ಸಮಸ್ಯೆಗಳ ಕುರಿತು ವಿಧಾನ ಪರಿಷತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿರುವ ನಾನು ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಪರವಾಗಿ ಸದಾ ನಿಂತು ಹೋರಾಟ ನಡೆಸುವೆ ಎಂದು ತಿಳಿಸಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕಾಗಿ ನಿರಂತರ ಪ್ರಯತ್ನ ನಡೆಸಲಾಗುವುದು.

ಶಿಕ್ಷಕರ ಹಿತಾಸಕ್ತಿ ಕಾಪಾಡುವುದು, ಅವರ ಸೇವಾ ಸಮಸ್ಯೆಗಳಿಗೆ ನ್ಯಾಯ ದೊರಕಿಸುವುದು ಹಾಗೂ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಶಿಕ್ಷಕರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಮನವಿಯಲ್ಲಿರುವ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕು ಎಂದು ಒತ್ತಾಯಿಸುತ್ತೇನೆ