ಪ್ರಿಯಾಂಕ್ ಖರ್ಗೆ ಜನ್ಮದಿನ: ನಿರಾಶ್ರಿತರ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆ
ಪ್ರಿಯಾಂಕ್ ಖರ್ಗೆ ಜನ್ಮದಿನ: ನಿರಾಶ್ರಿತರ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆ
ಕಲಬುರಗಿ: ಗೃಹ, ಐಟಿ-ಬಿಟಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನದ ಪ್ರಯುಕ್ತ ಕಲಬುರಗಿ ನಗರದ ನಿರಾಶ್ರಿತರ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ನಗರದ ಶ್ರೀ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಸಚಿನ್ ಭೀಮನ್ ಹಾಗೂ ಶ್ವೇತಾ ನಿಧಿ ಅವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರಾಶ್ರಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸೇವೆ ಒದಗಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ ದೊಡ್ಡಮನಿ ಅವರು, ಉಚಿತ ಆರೋಗ್ಯ ಸೇವೆ ನೀಡಿದ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಅಭಿನಂದಿಸಿದರು. ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗಿ ಪ್ರಾಮಾಣಿಕ ಆಡಳಿತ ನೀಡುತ್ತಿದ್ದಾರೆ. ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿ ದಲಿತ ಸಮುದಾಯದ ಏಳಿಗೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರು. ಐಟಿ-ಬಿಟಿ ಸಚಿವರಾಗಿ ಕರ್ನಾಟಕವನ್ನು ದೇಶದಲ್ಲಿಯೇ ಮುಂಚೂಣಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಕಲ್ಯಾಣ ಪಥ ಮತ್ತು ಪ್ರಗತಿ ಪಥದಂತಹ ಯೋಜನೆಗಳ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಗೃಹ ಸಚಿವರಾಗಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಯುವಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನಗಳಿಗೆ ಚಾಲನೆ ನೀಡಿದ್ದಾರೆ. ಸ್ನೇಹಿತರ ಒತ್ತಡ, ಜೀವನದ ಒತ್ತಡ ಹಾಗೂ ಡಿಜಿಟಲ್ ಜಾಲದ ಪ್ರಭಾವದಿಂದ ಯುವಕರು ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುವುದನ್ನು ತಡೆಯುವ ಮೂಲಕ ಅವರ ಭವಿಷ್ಯ ರೂಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ಮತ್ತು ಪರಿಹಾರ ವಿತರಣೆಯಲ್ಲಿ ವಿಶೇಷ ಕಾಳಜಿ ವಹಿಸಿದ್ದಾರೆ. ಜಿಲ್ಲೆಯ ರೈತರಿಗೆ ದಾಖಲೆಯ ₹650 ಕೋಟಿ ಬೆಳೆ ವಿಮೆ ಪರಿಹಾರ ಒದಗಿಸಿದ್ದಾರೆ. 2025-26ನೇ ಸಾಲಿನಲ್ಲಿ ಅತಿವೃಷ್ಟಿ ಹಾಗೂ ಮಳೆಹಾನಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ ಅಡಿಯಲ್ಲಿ ₹498.73 ಕೋಟಿ ಬೆಳೆ ನಷ್ಟ ಪರಿಹಾರವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಜಮೆ ಮಾಡಿಸಿರುವುದು ಶ್ಲಾಘನೀಯ ಎಂದರು.
ಅಭಿವೃದ್ಧಿಯ ಹರಿಕಾರ ಹಾಗೂ ನೇರ ನುಡಿಯ ನಾಯಕನಾಗಿರುವ ಪ್ರಿಯಾಂಕ್ ಖರ್ಗೆ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ನಿರ್ದೇಶಕ ರಾಜಾ ಮೈನೋದ್ದಿನ್, ಮಹೇಶ ಗಂವಾರ್, ಅಜಯ ಉದನೂರು, ಹರ್ಷವರ್ಧನ, ಜಯವರ್ಧನ ಅಂಬಲಗಿ, ಪ್ರದೀಪಕುಮಾರ ಚಿಂಚನಸೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

