ಮತಾಂತರ ವಿರೋಧಿ ಕಾಯ್ದೆ ರದ್ದುಗೊಳಿಸಲು ಚಳಿಗಾಲದ ಅಧಿವೇಶನದಲ್ಲೇ ಮಸೂದೆ ಮಂಡಿಸಿ

ಮತಾಂತರ ವಿರೋಧಿ ಕಾಯ್ದೆ ರದ್ದುಗೊಳಿಸಲು ಚಳಿಗಾಲದ ಅಧಿವೇಶನದಲ್ಲೇ ಮಸೂದೆ ಮಂಡಿಸಿ

ಮತಾಂತರ ವಿರೋಧಿ ಕಾಯ್ದೆ ರದ್ದುಗೊಳಿಸಲು ಚಳಿಗಾಲದ ಅಧಿವೇಶನದಲ್ಲೇ ಮಸೂದೆ ಮಂಡಿಸಿ

ಕಲಬುರಗಿ: ಕರ್ನಾಟಕ ಧಾರ್ಮಿಕ ಸ್ವಾತಂತ್ರ‍್ಯ ಹಕ್ಕು ಸಂರಕ್ಷಣಾ ಅಧಿನಿಯಮ-೨೦೨೨ (ಮತಾಂತರ ವಿರೋಧಿ ಕಾಯ್ದೆ) ರದ್ದುಗೊಳಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕ್ರೈಸ್ತ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತಾಂತರ ವಿರೋಧಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿತ್ತು. ಈ ಭರವಸೆಯನ್ನು ಕ್ರೈಸ್ತ ಸಮುದಾಯ ಸ್ವಾಗತಿಸಿ ಕಾಂಗ್ರೆಸ್ ನಾಯಕತ್ವದ ಮೇಲೆ ವಿಶ್ವಾಸವಿಟ್ಟಿತ್ತು. ಆದ್ದರಿಂದ ರಾಜ್ಯ ಸರ್ಕಾರವು ಸಮುದಾಯಕ್ಕೆ ನೀಡಿದ ಭರವಸೆಯನ್ನು ಈಡೇರಿಸಬೇಕು ಎಂದು ಒಕ್ಕೂಟದ ಮುಖಂಡರು ಆಗ್ರಹಿಸಿದರು.

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿಯೇ ಕಾಯ್ದೆ ರದ್ದತಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಬೇಕು. ಕಾಂಗ್ರೆಸ್‌ನ ಎಲ್ಲ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮಸೂದೆಗೆ ಬೆಂಬಲ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭಾರತ ಸಂವಿಧಾನದ ವಿಧಿ ೨೫ರ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ದೊರೆಯುವ ಧಾರ್ಮಿಕ ಸ್ವಾತಂತ್ರ‍್ಯ, ಆತ್ಮಸಾಕ್ಷಿಯ ಸ್ವಾತಂತ್ರ‍್ಯ ಹಾಗೂ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕುಗಳನ್ನು ರಕ್ಷಿಸಬೇಕು. ಕ್ರೈಸ್ತರು ಸೇರಿದಂತೆ ಎಲ್ಲ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಗೌರವಯುತ ಜೀವನವನ್ನು ಖಚಿತಪಡಿಸಬೇಕು. ರಾಜ್ಯದಲ್ಲಿ ಜಾತ್ಯತೀತತೆ, ಸಮಾನತೆ, ಸಹೋದರತ್ವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉದ್ದೇಶಿಸಿ ಸಿದ್ಧಪಡಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು. ಕ್ರೈಸ್ತ ಸಮುದಾಯಕ್ಕೆ ನೀಡಿದ ಭರವಸೆಯನ್ನು ಈಡೇರಿಸಿ ಧಾರ್ಮಿಕ ಸ್ವಾತಂತ್ರ‍್ಯ ಹಾಗೂ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸಂಧ್ಯರಾಜ್ ಸ್ಯಾಮ್ಯುಯೆಲ್, ಲೂಯಿಸ್ ಕೋರಿ, ಎಂ ಎ ಅಲಂಕಾರ್, ಪಾಸ್ಟರ್ ಜಯರಾಜ್ ಮತ್ತು ಪಾಸ್ಟರ್ ರಾಬಿನ್ ಪ್ರತಾಪ್ ಇದ್ದರು.