ಎರಡು ವರ್ಷಗಳಿಂದ ಕೆಟ್ಟು ನಿಂತ 108 ಆಂಬುಲೆನ್ಸ್;

ಎರಡು ವರ್ಷಗಳಿಂದ ಕೆಟ್ಟು ನಿಂತ 108 ಆಂಬುಲೆನ್ಸ್;

ಎರಡು ವರ್ಷಗಳಿಂದ ಕೆಟ್ಟು ನಿಂತ 108 ಆಂಬುಲೆನ್ಸ್; ಸಾರ್ವಜನಿಕರ ಪರದಾಟ

ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಹ್ಮದ್ ಮಸ್ತಾನ್ ಆಕ್ರೋಶ

ಶಹಾಬಾದ್: ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ 108 ತುರ್ತು ಆಂಬುಲೆನ್ಸ್ ಕಳೆದ ಎರಡು ವರ್ಷಗಳಿಂದ ಕೆಟ್ಟು ನಿಂತಿದ್ದು, ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಮಹ್ಮದ್ ಮಸ್ತಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಹಾಬಾದ್ ತಾಲೂಕಿನಲ್ಲಿ ಸುಮಾರು ಒಂದು ಲಕ್ಷ ಜನಸಂಖ್ಯೆಯಿದ್ದು, ತುರ್ತು ಆರೋಗ್ಯ ಸೇವೆಗೆ 108 ಆಂಬುಲೆನ್ಸ್ ಅತ್ಯಂತ ಅಗತ್ಯವಾಗಿದೆ. ಆದರೆ, ಎರಡು ವರ್ಷಗಳಿಂದ ಆಂಬುಲೆನ್ಸ್ ದುರಸ್ತಿಯಾಗದೆ ನಿಂತಿರುವುದು ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗಲೆಲ್ಲ ಇಂಜಿನ್ ಕೆಟ್ಟಿದೆ ಎಂಬ ಉತ್ತರ ನೀಡಲಾಗುತ್ತಿದೆ ಎಂದು ದೂರಿದರು.

ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಸೇವೆಗೆ ಬಳಸುವ ನಗು-ಮಗು ಆಂಬುಲೆನ್ಸ್‌ಗೂ ₹600 ಶುಲ್ಕ ಪಾವತಿಸಬೇಕಾದ ಪರಿಸ್ಥಿತಿ ಇದೆ. ಅಪಘಾತಗಳಲ್ಲಿ ಗಾಯಗೊಂಡವರನ್ನು ಕಲಬುರಗಿಗೆ ಸಾಗಿಸಲು ಆಟೋ ಮತ್ತು ಟಂಟಂ ವಾಹನಗಳನ್ನು ಅವಲಂಬಿಸಬೇಕಾಗಿದೆ. ಇದರಿಂದ ಬಡವರು, ರೈತರು ಹಾಗೂ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಮಸ್ಯೆಯನ್ನು ಸಂಬಂಧಪಟ್ಟ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಶಹಾಬಾದ್ ಸಮುದಾಯ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್‌ನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಬೇಕು ಎಂದು ಎಎಂಒ ಡಾ. ಸಂತೋಷ ಪಾಟೀಲ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಮಸ್ಯೆಯನ್ನು ಶೀಘ್ರ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಹ್ಮದ್ ಮಸ್ತಾನ್ ಎಚ್ಚರಿಕೆ ನೀಡಿದ್ದಾರೆ.