ತೆರೆದ ಮನೆ ಕಾರ್ಯಕ್ರಮ : ಪೊಲೀಸ್ ಠಾಣೆಗೆ ಸಿ.ಎ.ಐ ಕಾಲೇಜು ವಿದ್ಯಾರ್ಥಿಗಳ ಭೇಟಿ :..
ತೆರೆದ ಮನೆ ಕಾರ್ಯಕ್ರಮ : ಪೊಲೀಸ್ ಠಾಣೆಗೆ ಸಿ.ಎ.ಐ ಕಾಲೇಜು ವಿದ್ಯಾರ್ಥಿಗಳ ಭೇಟಿ :..
ಶಹಾಬಾದ: ವಿದ್ಯಾರ್ಥಿಗಳಲ್ಲಿ ಪೊಲೀಸರ ಬಗ್ಗೆ ಇರುವ ಭಯವನ್ನು ಹೋಗಲಾಡಿಸಿ, ಪೊಲೀಸ್ ಇಲಾಖೆಯ ಕಾರ್ಯವೈಖರಿ ಹಾಗೂ ಕಾನೂನುಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮಕ್ಕೆ ಸಿ.ಎ.ಐ ಕಾಲೇಜಿನ ವಿದ್ಯಾರ್ಥಿಗಳು ಭೇಟಿ ನೀಡಿದರು.
ಪೊಲೀಸ್ ಇಲಾಖೆಯ ವತಿಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಗುರುವಾರ ಎಲ್ಲ ಪೊಲೀಸ್ ಠಾಣೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಈ ಸಂದರ್ಭದಲ್ಲಿ ಎಎಸ್ಐ ಶ್ರೀಕಾಂತ ನಾಯಕ ಅವರು ವಿದ್ಯಾರ್ಥಿಗಳಿಗೆ ತುರ್ತು ಸಹಾಯವಾಣಿ 112, ಮಕ್ಕಳ ಸಹಾಯವಾಣಿ 1098 ಸೇರಿದಂತೆ ಬಾಲ್ಯವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿಶೇಷ ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಅಲ್ಲದೆ, ಅಕ್ರಮ ಮದ್ಯ ಮಾರಾಟ, ಕಲಬೆರಕೆ ಸೇಂದಿ ಮಾರಾಟ, ಇಸ್ಪೀಟ್, ಜೂಜಾಟ, ಮಟ್ಕಾ ಚೀಟಿ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಿಂದ ಸಮಾಜದ ಮೇಲೆ, ವಿಶೇಷವಾಗಿ ಮಕ್ಕಳ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿ, ಇಂತಹ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಉಪನ್ಯಾಸಕ ಶರಣು ಹರ್ಲಕಟ್ಟಿ ಮಾತನಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪೊಲೀಸರ ಬಗ್ಗೆ ಇರುವ ಭಯ ಮತ್ತು ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ತೆರೆದ ಮನೆ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪೊಲೀಸರು ಜನಸ್ನೇಹಿಗಳಾಗಿದ್ದು, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಾರೆ. ವಿದ್ಯಾರ್ಥಿಗಳು ಪೊಲೀಸ್ ಠಾಣೆ ಹಾಗೂ ಇಲಾಖೆಯ ಕಾರ್ಯವೈಖರಿಯನ್ನು ತಿಳಿದುಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಿ.ಎ.ಐ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೋಟ ಮಾಡಿ :..ತೆರೆದ ಮನೆಯಲ್ಲಿ ಪೊಲೀಸ್ ಠಾಣೆ ನೋಡುವ ಭಾಗ್ಯ ಒದಗಿದೆ, ಮಕ್ಕಳಿಗೆ ಪೊಲೀಸ ವೃತ್ತಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಹಾಗೆ ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸಲು ನೇರವಾಗಿದೆ :.. ದಿನೇಶಚಂದ್ರ ಕಟ್ಟಿ, ಪಿಯು ವಿಧ್ಯಾರ್ಥಿ ಶಹಾಬಾದ.

