ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ - ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ
ಬೀದರ್ ಹಾಗೂ ರಾಯಚೂರು ಪಟ್ಟಣಗಳನ್ನು ನಗರಪಾಲಿಕೆ ಮಾಡಲು ಅನುಮತಿ
ಬೀದರ್ ಮತ್ತು ಕಲ್ಬುರ್ಗಿಯ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ - ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ:
ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇಂದು ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ ಅನುದಾನವನ್ನು ಕೇಂದ್ರ ಸರ್ಕಾರ ನೀಡಬೇಕಿದೆ ಎಂದರು.
ಕೇಂದ್ರದಿಂದ 5000 ಕೋಟಿ ರೂ. ಕೋರಲು ನಿರ್ಣಯ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೂ ಕೂಡ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.
ಖಾಲಿ ಹುದ್ದೆಗಳ ಭರ್ತಿಗೆ ಕ್ರಮ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ 17439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ 371ಜೆ ಜಾರಿ
ಇಂದು ಕಲ್ಯಾಣ ಕರ್ನಾಟಕದ ವಿಮೋಚನಾ ದಿನವಾದ್ದರಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. 2013 ರಿಮದ 2018 ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 2014 ರಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಸಲಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಹೋರಾಟದಿಂದ 371 ಜೆ ಜಾರಿಗೆ ತರಲಾಯಿತು. ವಿಶೇಷ ಸವಲತ್ತುಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ನೀಡುವ ಉದ್ದೇಶದಿಂದ 2013 ರಲ್ಲಿ ಸಂವಿಧಾನ ತಿದ್ದುಪಡಿಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನಿನ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು ಎಂದರು.
ಹಿಂದುಳಿದ ತಾಲ್ಲೂಕುಗಳ ಸ್ಥಿತಿಗತಿ ಪರಿಶೀಲನೆಗೆ ಸಮಿತಿ
2002 ರಲ್ಲಿ ನಂಜುಂಡಪ್ಪ ವರದಿಯಂತೆ ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಸಮಿತಿ ರಚಿಸಲಾಗಿತ್ತು. ಪ್ರಸ್ತುತ ಈ ಭಾಗದ ತಾಲ್ಲೂಕುಗಳ ಸ್ಥಿತಿಗತಿಯ ಪರಿಶೀಲನೆ ನಡೆಸಲು ಡಾ.ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಈ ಸಮಮಿಯನ್ನು ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
45 ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ತೀರ್ಮಾನ
ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು , 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2 ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ 890 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ಹೆಚ್.ಕೆ.ಪಾಟೀಲ, ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ, ಈಶ್ವರ ಖಂಡ್ರೆ, ರಹೀಮ್ ಖಾನ್, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ ಇದ್ದರು.